ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಪ್ರತಿಷ್ಠಿತ ಖಾಸಗಿ ಕಾಲೇಜಿನ ಡೀನ್ ಸೇರಿದಂತೆ ಮೂವರು ಇಂದು ಬಲಿಯಾಗಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಡೀನ್ ಆಗಿದ್ದ ಹಿರಿಯ ಪ್ರಾಧ್ಯಾಪಕರು ಅನಾರೋಗ್ಯದಿಂದ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಮೃತರ ಗಂಟಲು ದ್ರವದ ಮಾದರಿ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಬಂದಿದೆ.
ಇದೇ ವೇಳೆ, ಮೃತ ಡೀನ್ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗದಗ್ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆಗೂ ಕೊರೊನಾ ದೃಢಪಟ್ಟಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಮೃತಪಟ್ಟಿದ್ದಾಳೆ. ಬಾಗಲಕೋಟೆಯಲ್ಲೂ ಕೊರೊನಾ ಅಟ್ಟಹಾಸಕ್ಕೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ.
ಮಾಜಿ ಶಾಸಕರಿಗೂ ಕೊರೊನಾ..!
ವಿಜಯಪುರದಲ್ಲಿ ಮಾಜಿ ಶಾಸಕರಿಗೆ ಕೊರೊನಾ ಪಾಸಿಟಿಟವ್ ಬಂದಿದೆ. ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಜೂ.22ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೋವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಹೀಗಾಗಿ ಖಾಸಗಿ ಆಸ್ಪತ್ರೆಯ ಐಸೋಲೇಶನ್ ವಾರ್ಡ್‍ನಲ್ಲಿ ಮಾಜಿ ಶಾಸಕರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾಜಿ ಶಾಸಕರಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ಅವರ ಮನೆಯನ್ನು ಮಾತ್ರ ಸೀಲ್‍ಡೌನ್ ಮಾಡಲಾಗಿದೆ. ಮಾಜಿ ಶಾಸಕರ ಮನೆಯಲ್ಲಿ ಮೂವರು ಮಾತ್ರ ಇದ್ದು, ಹೋಂ ಕ್ವಾರಂಟೈನ್ ಮಾಡಲಾಗಿದೆ. ಕೋವಿಡ್-19 ನಿಯಮಗಳ ಪ್ರಕಾರ ಸೋಂಕಿತರ ಮನೆಯನ್ನು ಮಾತ್ರ ಸೀಲ್‍ಡೌನ್ ಮಾಡಿದ್ದೇವೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸಮರ್ಥನೆ ನೀಡಿದ್ದಾರೆ.
ಬೆಂಗಳೂರಿನ ಪೊಲೀಸರಿಗೆ ತಪ್ಪದ ಕಂಟಕ
ಬೆಂಗಳೂರು ನಗರದ ಪೊಲೀಸರಿಗೆ ಕೊರೊನಾ ಕಂಟಕವಾಗಿ ಪರಿಣಮಿಸುತ್ತಿದೆ. ಇಂದೂ ಕೂಡ ಮೂವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಿಸಿಬಿ ಪೊಲೀಸರ ಸಂಪರ್ಕದಲ್ಲಿದ್ದ ಪೇದೆಗೂ ಕೊರೊನಾ ಪಾಸಿಟಿವ್ ಬಂದಿದೆ.