ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೋಲಿನ ಆಘಾತ ಕಂಡ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧ ನಡೆಯುವ ಟಿ20 ಸರಣಿಗೆ ಸಜ್ಜಾಗಿದ್ದು, ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಏಕದಿನ ವಿಶ್ವಕಪ್ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ತಂಡದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಈ ನಡುವೆ ವಿಶ್ವಕಪ್ ಟೂರ್ನಿಯ ವೇಳೆ ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ “ಮಿ.360” ಖ್ಯಾತಿಯ ಸೂರ್ಯಕುಮಾರ್‌ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಹೀಗಾಗಿ ಟಿ20 ಕ್ರಿಕೆಟ್‌ನ ನಂ.1 ಬ್ಯಾಟರ್ ಆಗಿರುವ ʼಸ್ಕೈʼ ಮೊದಲ ಬಾರಿಗೆ ಭಾರತ ತಂಡದ ನಾಯಕತ್ವದ ಸವಾಲು ಎದುರಿಸಲು ಸಜ್ಜಾಗಿದ್ದಾರೆ.
ಐದು ಪಂದ್ಯಗಳ ಆಸೀಸ್ ಸರಣಿಗೆ ಯುವ ಆಟಗಾರರಿಗೆ ಹೆಚ್ಚಿನ ಹೊಣೆ ನೀಡಿರುವ ಹಿನ್ನೆಲೆಯಲ್ಲಿ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ರಿಂಕು ಸಿಂಗ್, ತಿಲಕ್ ವರ್ಮಾ, ಯಶಸ್ವಿ ಜೈಸ್ವಾಲ್ ಅವರುಗಳಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇವರೊಂದಿಗೆ ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ ಅವರುಗಳು ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದರೆ. ಜಿತೇಶ್ ಶರ್ಮಾ ಅವರಿಗೆ ವಿಕೆಟ್ ಕೀಪರ್ ಜವಾಬ್ದಾರಿ ನೀಡಲಾಗಿದೆ. ಇನ್ನೂ ಆಲ್ರೌಂಡರ್ ಸ್ಥಾನದಲ್ಲಿ ಅಕ್ಸರ್ ಪಟೇಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನೂ ಬೌಲಿಂಗ್‌ನಲ್ಲಿ ಹಿರಿಯ ಆಟಗಾರರಿಗೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯಿ ಹಾಗೂ ಅಕ್ಸರ್ ಪಟೇಲ್ ಅವರು ತಂಡದ ಬೌಲಿಂಗ್ ವಿಭಾಗದ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇವರೊಂದಿಗೆ ಏಕದಿನ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನದಿಂದ ಮಿಂಚಿದ್ದ ಶ್ರೇಯಸ್ ಅಯ್ಯರ್, ಆಸೀಸ್ ವಿರುದ್ಧದ T20I ಸರಣಿಯ ಕೊನೆಯ ಎರಡು ಪಂದ್ಯಕ್ಕೆ ತಂಡವನ್ನ ಸೇರಿಕೊಳ್ಳಲಿದ್ದು, ತಂಡದ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಆರಂಭಿಕ 3 ಪಂದ್ಯಗಳಲ್ಲಿ ಋತುರಾಜ್ ಗಾಯಕ್ವಾಡ್ ಅವರು ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್, ಶ್ರೇಯಸ್ ಅಯ್ಯರ್ (ಕೊನೆಯ ಎರಡು T20I ಪಂದ್ಯಗಳಿಗೆ)
ಭಾರತ v ಆಸ್ಟ್ರೇಲಿಯಾ ಟಿ20 ವೇಳಾಪಟ್ಟಿ:
1ನೇ ಟಿ20 – ನವೆಂಬರ್ 23, ವಿಶಾಖಪಟ್ಟಣಂ
2ನೇ ಟಿ20 – ನವೆಂಬರ್ 26, ತಿರುವನಂತಪುರಂ
3ನೇ ಟಿ20 – ನವೆಂಬರ್ 28, ಗುವಾಹತಿ
4ನೇ ಟಿ20 – ಡಿಸೆಂಬರ್ 1, ರಾಯ್‌ಪುರ್
5ನೇ ಟಿ20 – ಡಿಸೆಂಬರ್ 3, ಬೆಂಗಳೂರು
IND v AUS, Team India, Australia, Suryakumar Yadav, T20I Series