ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಬಿಜೆಪಿ ಕೂಡ ಹೋರಾಟಗಳನ್ನು ನಡೆಸಿದೆ. ಕಾಂಗ್ರೆಸ್ ಕೂಡ ಹೋರಾಟ ಮಾಡಬಹುದು. ಆದರೆ ನೇಪಾಳ ಮತ್ತು ಬಾಂಗ್ಲಾದೇಶದ ಮಾದರಿಯಲ್ಲಿ ದೊಂಬಿ, ಗಲಭೆಗಳನ್ನು ಸೃಷ್ಟಿಸುತ್ತೇವೆ ಎಂದು ಬೆದರಿಕೆ ಹಾಕುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿದೆ. ಇಂತಹ ಅರಾಜಕತೆಯ ಪ್ರಯತ್ನಗಳಿಗೆ ದೇಶದ ಜನರು ಎಂದಿಗೂ ಬೆಂಬಲ ನೀಡುವುದಿಲ್ಲ ಎಂದು ಆರ್.ಅಶೋಕ ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಇಂದು ತನ್ನದೇ ಆದ ರಾಜಕೀಯ ಅಜೆಂಡಾ ಮತ್ತು ಸ್ವಂತಿಕೆ ಉಳಿದಿಲ್ಲ. ಅಮೆರಿಕದ ಫಂಡಿಂಗ್ ಸೇರಿದಂತೆ ಹೊರಗಿನ ಶಕ್ತಿಗಳ ಪ್ರಭಾವದ ಕುರಿತು ಹಲವು ಆರೋಪಗಳು ಕೇಳಿಬರುತ್ತಿವೆ. 120 ವರ್ಷಗಳ ಇತಿಹಾಸವಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಇಂದು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧೀಜಿಯವರ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ. ಸ್ವಾತಂತ್ರ್ಯಾನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕು ಎಂಬುದು ಗಾಂಧೀಜಿಯವರ ಆಶಯವಾಗಿತ್ತು. ಆದರೆ ಇಂದು ಕಾಂಗ್ರೆಸ್ ಯಾವ ಸ್ಥಿತಿಗೆ ತಲುಪಿದೆ ಎಂಬುದನ್ನು ದೇಶದ ಜನರೇ ನೋಡುತ್ತಿದ್ದಾರೆ ಎಂದರು.
ಪ್ರಧಾನಮಂತ್ರಿ ವಿರುದ್ಧ ವೈಯಕ್ತಿಕ ಟೀಕೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದ ಕಾಂಗ್ರೆಸ್ ನಾಯಕರು ವೈಯಕ್ತಿಕ ನಿಂದನೆಗೆ ಇಳಿದಿದ್ದಾರೆ. ಹಿಂದೆ ಮೋದಿಯವರನ್ನು ಚಾಯ್‌ವಾಲಾ ಎಂದು ಹೀಯಾಳಿಸಿದರು, ಪಕೋಡಾ ವಿಚಾರದಲ್ಲಿ ಟೀಕಿಸಿದರು. ಈಗ ಅವರ ತಂದೆಯವರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಹತಾಶ ಮನಸ್ಥಿತಿಯನ್ನು ತೋರಿಸುತ್ತದೆ. ಪ್ರಧಾನಮಂತ್ರಿಯವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಪಕ್ಷವಲ್ಲ, ದೇಶದ ಜನರು ತಮ್ಮ ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೂ ಜನರ ಮತಗಳಿಂದಲೇ ಅಧಿಕಾರಕ್ಕೆ ಬಂದಿದ್ದಾರೆ. ಜನರ ಮತದಿಂದ ಆಯ್ಕೆಯಾದ ಪ್ರಧಾನಮಂತ್ರಿಯವರಿಗೂ ಗೌರವ ನೀಡಬೇಕು. ರಾಜಕೀಯ ವಿರೋಧದ ಹೆಸರಿನಲ್ಲಿ ವೈಯಕ್ತಿಕ ನಿಂದನೆ ಮಾಡುವುದು ಸರಿಯಲ್ಲ ಎಂದು ಆರ್.ಅಶೋಕ ಹೇಳಿದರು.








