ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ನಾವು ಮೂರನೇ ಹಂತಕ್ಕೆ ಕಾಲಿಟ್ಟಿದ್ದೇವೆ ಎಂದು ಕೆಲವರು ವಾದಿಸುತ್ತಿದ್ದಾರೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆ ಭಾರತದಲ್ಲಿ ಒಂದು ಸಾವಿರ ದಾಟಿದೆ ಎಂದು ಕೋವಿಡ್ ಟ್ರ‍್ಯಾಕರ್‌ನಲ್ಲಿ ತಿಳಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 186ಕ್ಕೆ ಏರಿದ್ದು, ಈ ಪೈಕಿ 25 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆರು ಜನ ಕೊರೊನಾಸುರನಿಗೆ ಬಲಿಯಾಗಿದ್ದಾರೆ. ಕೇರಳದಲ್ಲಿ 182 ಜನ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇವರಲ್ಲಿ 5 ಜನ ಗುಣಮುಖರಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಇಂದು 12 ಹೊಸ ಸೋಂಕಿತರು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 76ಕ್ಕೆ ಏರಿದೆ. ಇನ್ನು ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ67ಕ್ಕೆ ಏರಿದೆ. ಗುಜರಾತ್ ನಲ್ಲಿ 55 ಜನಕ್ಕೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.