ಕಾಂಗ್ರೆಸ್ (Congress) ಸರ್ಕಾರ ರಾಜ್ಯದ ಜನರಿಗೆ ಭಾಗ್ಯಗಳನ್ನು ನೀಡದಿದ್ದರೂ ಪರವಾಗಿಲ್ಲ, ದೌರ್ಭಾಗ್ಯಗಳನ್ನು ಮಾತ್ರ ನೀಡಬೇಡಿ ಎಂದು ಜನ ಛೀಮಾರಿ ಹಾಕುವಂತಾಗಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Petrol Price Hike) ಏರಿಕೆ ಮಾಡಿರುವ ವಿಚಾರವನ್ನು ಖಂಡಿಸಿ ಎಕ್ಸ್ ನಲ್ಲಿ ಸರಿಣಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿದ್ದೀರಿ. ಈ ಮೂಲಕ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ಎಂದು ಬರೆದಿದ್ದಾರೆ.
ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣಿ ರೂಪದಲ್ಲಿ ಏರಿಸುತ್ತಲೇ ಇದ್ದೀರಿ. ಇದೀಗ ಪೆಟ್ರೋಲ್ 3ರೂ. ಹಾಗೂ ಡೀಸೆಲ್ ಮೇಲೆ 3.50 ರೂ. ದರ ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳವಾಗಲಿದೆ. ಇದರಿಂದ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ ಎಂದು ಖಡಕ್ ಆಗಿ ಎಚ್ಚರಿಸಿ ಟ್ವೀಟ್ ಮಾಡಿದ್ದಾರೆ.
ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿದ್ದೀರಿ. ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಬಿಜೆಪಿ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಬಿಜೆಪಿ ಬೀದಿಗಿಳಿದು ಹೋರಾಡಲಿದೆ ಎಂದು ಪೋಸ್ಟ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.