ನವದೆಹಲಿ : ದೇಶದಲ್ಲಿ ತೈಲ ಬೆಲೆ ಪ್ರತಿ ದಿನ ಏರಿಕೆ ಆಗುತ್ತಲೇ ಇದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ದೇಶದಾದ್ಯಂತ ಹಮ್ಮಿಕೊಂಡಿರುವ, ‘ಇಂಧನ ದರ ಏರಿಕೆ ವಿರುದ್ಧ ದನಿಯೆತ್ತಿ’ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂಧನ ದರ ಏರಿಕೆ ಮೂಲಕ ಕೇಂದ್ರ ಸರ್ಕಾರವು ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದರು. ಲಾಕ್ಡೌನ್ ಬಳಿಕ 22 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅವರು, ಬೆಲೆ ಏರಿಕೆ ನಿರ್ಧಾರವನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಜನರ ವೆಚ್ಚದ ಮೂಲಕ ಸರ್ಕಾರ ಲಾಭ ಗಳಿಸಲು ಹೊರಟಿದೆ. ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವು ಜನರಿಗೆ ನೆರವಾಗುವುದು ಬಿಟ್ಟು ಅವರು ಕಷ್ಟಪಟ್ಟು ಸಂಪಾದಿಸಿದ ಹಣದಿಂದ ಲಾಭ ಮಾಡುವುದು ಸರಿಯಲ್ಲ ಎಂದ ಸೋನಿಯಾ ಗಾಂಧಿ, ಒಂದೆಡೆ ಕೊರೊನಾ ವೈರಸ್ ಸಾಂಕ್ರಾಮಿಕದಿಂದ ಜನ ಸಂಕಷ್ಟಕ್ಕೆ ಸಿಲುಕಿರುವಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಜೀವನವನ್ನು ಮತ್ತಷ್ಟು ಕಷ್ಟಕರವಾಗಿಸಿದೆ ಎಂದು ಹೇಳಿದ್ದಾರೆ.