ಕಾಂಗ್ರೆಸ್ ಹಿನ್ನಡೆಗೆ ಜೆಡಿಎಸ್ ಮೈತ್ರಿ ಕಾರಣ, ಇನ್ನು ಮುಂದೆ ಯಾವ ಮೈತ್ರಿಯೂ ಇಲ್ಲ – ದಿನೇಶ್ ಗುಂಡೂರಾವ್
ಬೆಂಗಳೂರು, ಜುಲೈ3: ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಹಿನ್ನಡೆಗೆ ಜೆಡಿಎಸ್ ಜೊತೆಗಿನ ಮೈತ್ರಿ ಕಾರಣ. ಇನ್ನು ಮುಂದೆ ಯಾವ ಮೈತ್ರಿಯೂ ಇಲ್ಲ ಎಂದು ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲು ಮೈತ್ರಿಯೇ ಪ್ರಮುಖ ಕಾರಣ. ಜೆಡಿಎಸ್ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಭಾರಿ ಹಿನ್ನಡೆ ಅನುಭವಿಸುವಂತಾಯಿತು. ಹಾಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಮೈತ್ರಿಯೂ ಇಲ್ಲದೇ ಪಕ್ಷವು ಒಂದಾಗಿ ಮುನ್ನಡೆಯಬೇಕು ಎಂದು ಹೇಳಿದರು.
ಇಂದು ಪಕ್ಷವು ಒಗ್ಗಟ್ಟಿನಲ್ಲಿ ಇದ್ದು, ಎಲ್ಲಾ ನಾಯಕರು ಒಂದಾಗಿ ಕೈಜೋಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷವನ್ನು ಸಂಘಟಿತವಾಗಿ ಮುನ್ನಡೆಸುವ ಸಾಮರ್ಥ್ಯವಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರುವುದು ಖಂಡಿತ ಎಂದು ದಿನೇಶ್ ಗುಂಡೂರಾವ್ ಹೇಳಿದರು.