ರಾಜ್ಯದ ಪದವಿ ಕಾಲೇಜುಗಳಲ್ಲಿ ಕಡ್ಡಾಯ ಕನ್ನಡ ಕಲಿಕೆಗೆ ಹೈಕೋರ್ಟ್ ತಡೆ…
ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. 2021 ನೇ ಸಾಲಿನಲ್ಲಿ ಆಗಸ್ಟ್ 7 ಮತ್ತು ಸೆಪ್ಟೆಂಬರ್ 15 ರಂದು ಹೊರಡಿಸಿದ್ದ ಆದೇಶಗಳಿಗೆ ಇದೀಗ ತಡೆಯಾಜ್ಞೆ ಬಿದ್ದಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ ಟ್ರಸ್ಟ್ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರವು ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿತ್ತು.
ಕೇಂದ್ರ ಸರ್ಕಾರ ಈಗಾಗಲೇ ತನ್ನ ನಿಲುವು ಸ್ಪಷ್ಟಪಡಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯಾವುದೇ ಭಾಷೆಯ ಕಲಿಕೆ ಕಡ್ಡಾಯ ಅಲ್ಲವೆಂದು ಹೇಳಿದೆ. ಅದರಂತೆ, ರಾಜ್ಯದ ನಿಲುವು ಕೇಂದ್ರದ ನೀತಿಗೆ ವಿರುದ್ಧವಾಗಿದೆ.
ಇನ್ನು ಕಡ್ಡಾಯ ಕಲಿಕೆ ವಿಚಾರವನ್ನು ಮರುಪರಿಶೀಲಿಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸರ್ಕಾರಕ್ಕೆ ನ್ಯಾಯಾಲಯವೂ ಮೊದಲಿನಿಂದ ಹೇಳುತ್ತಲೇ ಬಂದಿದೆ. ಆದ್ದರಿಂದ, ಸರ್ಕಾರದ ಆದೇಶಕ್ಕೆ ತಡೆ ನೀಡುತ್ತಿದ್ದೇವೆ ಎಂದು ಪೀಠ ಸ್ಪಷ್ಟಪಡಿಸಿದೆ.








