ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡಿನಲ್ಲಿ (Mandya) ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ.
ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಪರಿಷತ್ತಿನ ಧ್ವಜಗಳ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಪ್ರಧಾನ ವೇದಿಕೆ ಮುಖ್ಯದ್ವಾರದ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಸಚಿವ ಚಲುವರಾಯಸ್ವಾಮಿ (Chaluvarayaswamy) ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದು, ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ (Mahesh Joshi) ಧ್ವಜಾರೋಹಣ ನಡೆಸಿದರು.
ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಪರಿಷತ್ತು ಧ್ವಜ ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಂದಿನಿಂದ ಮೂರು ದಿನ ಮಂಡ್ಯದಲ್ಲಿ ನುಡಿಹಬ್ಬದ ಕಲರವ ನಡೆಯಲಿದೆ. ಸಕ್ಕರೆ ನಗರಿ ಸಂಪೂರ್ಣ ಸಜ್ಜಾಗಿದೆ. ಮೂರು ದಶಕಗಳ ಬಳಿಕ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, 80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ ಹಾಗೂ ಎರಡು ಸಮಾನಂತರ ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ.
ಮಧ್ಯಾಹ್ನ 2 ಗಂಟೆಯಿಂದ ಗೋಷ್ಠಿಗಳು ಆರಂಭಗೊಳ್ಳಲಿದೆ. ಸಂಜೆ 7:30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 450 ಪುಸ್ತಕ ಮಳಿಗೆಗಳು ನಿರ್ಮಾಣಗೊಂಡಿದ್ದು, 350ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ನಿರ್ಮಾಣ ಮಾಡಲಾಗಿದೆ.








