ಮಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ(Karnataka Assembly Elections 2023) ರಂಗೇರಿದೆ. ಮತದಾರರನ್ನು ಸೆಳೆಯುವುದಕ್ಕಾಗಿ ಪಕ್ಷಗಳು ವಿವಿಧ ಗ್ಯಾರಂಟಿಗಳನ್ನು ಹಾಗೂ ಭರವಸೆಗಳನ್ನು ನೀಡುತ್ತಿವೆ. ಹಲವಾರು ಗ್ಯಾರಂಟಿ ನೀಡಿರುವ ಕಾಂಗ್ರೆಸ್ ಈಗ ಮತ್ತೊಂದು ಭರವಸೆ ನೀಡಿದೆ.
ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ರಾಹುಲ್ ಗಾಂಧಿ (Rahul Gandhi) ಘೋಷಿಸಿದ್ದಾರೆ. ಮಂಗಳೂರಿನ ಅಡ್ಯಾರು ಬಳಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.
ಇದು ಕಾಂಗ್ರೆಸ್ ನ ಐದನೇ ಗ್ಯಾರಂಟಿಯಾಗಿದೆ. ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದೂ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಅವರು ವಾಗ್ದಾನ ಮಾಡಿದರು.
ಕಾಂಗ್ರೆಸ್ ಭರವಸೆ ಈಡೇರಿಸುವುದಿಲ್ಲವೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ, ನಾವು ಭರವಸೆ ಈಡೇರಿಸುತ್ತೇವೆ, ಇದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಭರವಸೆ ನಾವು ಈಡೇರಿಸುತ್ತೇವೆ. ಪ್ರಧಾನಿ ಮೋದಿ ಅವರೇ ಭರವಸೆಗಳನ್ನು ಈಡೇರಿಸಿಲ್ಲ. ಬಡವರು, ರೈತರು, ಯುವಕರಿಗೆ ನೀಡಿದ ಭರವಸೆಗಳನ್ನು ಅವರು ಈಡೇರಿಸಿಲ್ಲ. ಆದರೆ, ಉದ್ಯಮಿ ಅದಾನಿಗೆ ನೀಡಿದ ಎಲ್ಲಾ ಭರವಸೆ ಈಡೇರಿಸಿದ್ದಾರೆ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷವು ಈಗಾಗಲೇ ನಾಲ್ಕು ಭರವಸೆಗಳನ್ನು (ಗ್ಯಾರಂಟಿ) ಘೋಷಿಸಿದೆ. ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3 ಸಾವಿರ ರೂ. ನೀಡುವುದಾಗಿ ಕಾಂಗ್ರೆಸ್ ಈಗಾಗಲೇ ಘೋಷಿಸಿದೆ. 34 ಸಾವಿರಕ್ಕೂ ಹೆಚ್ಚು ಜನ ನ್ನ ಗ್ಯಾರಂಟಿ ಯೋಜನೆಗೆ ಈಗಾಗಲೇ ಹೆಸರು ನೋಂದಾಯಿಸಿಕೊಂಡಿದ್ದಾರೆ ಎನ್ನಲಾಗಿದೆ.