ಸಿಎಂ ಬದಲಾವಣೆ ಚರ್ಚೆ | ಮುರುಘಾ ಮಠ ಶ್ರೀ ಎಚ್ಚರಿಕೆ
ಚಿತ್ರದುರ್ಗ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಬೆಂಕಿ ಬಿರುಗಾಳಿಯನ್ನು ಎಬ್ಬಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಕೆಳಗಿಳಿಯೋದು ಪಕ್ಕಾ ಆಗಿದ್ದು, ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಬಿಎಸ್ ವೈ ಪರ ಬ್ಯಾಟ್ ಬೀಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸುವುದರಿಂದ ಮುಂದೆ ಭಾರಿ ಬೆಲೆ ತೆರಬೇಕಾಗುತ್ತದೆ.
ರಾಜಕೀಯ ಜೀವನವನ್ನು ಏಕವ್ಯಕ್ತಿಯಿಂದ ಆರಂಭಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದ ಹೆಗ್ಗಳಿಕೆಗೆ ಪಾತ್ರರಾದವರು ಯಡಿಯೂರಪ್ಪ. ನೇರ ನುಡಿ ಹಾಗೂ ಧೀರ ನಡೆಗೆ ಹೆಸರಾದವರು ಎಂದು ತಿಳಿಸಿದ್ದಾರೆ.
ಅಲ್ಲದೆ ಪ್ರತಿ ಚುನಾವಣೆಯೂ ಇವರ ಮುಂದಾಳತ್ವದಲ್ಲಿ ನಡೆಯುತ್ತಾ ಬಂದಿದೆ. ಪಕ್ಷಕ್ಕೆ ಅಪಾರವಾಗಿ ಶ್ರಮಿಸಿದ್ದಾರೆ. ಇಂತಹ ಮೇಧಾವಿ ಹಾಗೂ ಮುತ್ಸದ್ಧಿಯನ್ನು ಅಲಕ್ಷ್ಯ ಮಾಡುವುದು ಸರಿಯಲ್ಲ ಎಂದು ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.