1.5 ಕೋಟಿ ಕೋವಿಡ್ ಲಸಿಕೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ
ನವದೆಹಲಿ, – ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರನ್ನು ಭೇಟಿ ಮಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಿದ್ದಾರೆ.
ಇಂದು ಕೇಂದ್ರದ ಆರೋಗ್ಯ ಸಚಿವರನ್ನು ಭೇಟಿ ಮಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಕೋವಿಡ್ ಲಸಿಕಾಕರಣ ವೇಗವಾಗಿ ನಡೆಯುತ್ತಿದ್ದು, ಇದಕ್ಕಾಗಿ ಕೇಂದ್ರದಿಂದ ಪ್ರತಿ ತಿಂಗಳಿಗೆ ಪೂರೈಸುವ ಲಸಿಕೆ ಪ್ರಮಾಣವನ್ನು 1.5 ಕೋಟಿ ಡೋಸ್ ಗೆ ಹೆಚ್ಚಿಸಬೇಕು ಎಂದು ಸಚಿವರು ಕೋರಿದರು. ಇದಕ್ಕೂ ಮುನ್ನ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪಾಲ್ ಅವರನ್ನು ಭೇಟಿ ಮಾಡಿದ ಸಚಿವರು, ಇದೇ ಮನವಿಯನ್ನು ಸಲ್ಲಿಸಿದರು.
ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೋರಿಕೆ
ನಿಮ್ಹಾನ್ಸ್ ಮತ್ತು ಕಿದ್ವಾಯಿ ಆಸ್ಪತ್ರೆಗಳು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಾಗಿವೆ. ಈ ಸಂಸ್ಥೆಗಳಿಗೆ ಹೊರರಾಜ್ಯಗಳಿಂದಲೂ ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳ ಸಂಖ್ಯೆ ಹೆಚ್ಚಿ ಸಂಸ್ಥೆಗಳ ಮೇಲೆ ಒತ್ತಡ ಹೆಚ್ಚಿರುವುದರಿಂದ ಈ ಎರಡೂ ಸಂಸ್ಥೆಗಳ ನಾಲ್ಕು ಪ್ರಾದೇಶಿಕ ಕೇಂದ್ರ ಆಸ್ಪತ್ರೆಗಳನ್ನು ಆರಂಭಿಸಬೇಕು ಎಂದು ಸಚಿವರು ಕೋರಿದರು.
ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಂಜೂರಾತಿಯಲ್ಲಿ ನಿರ್ಮಿಸುತ್ತಿರುವ ಹೊಸ ಮೆಡಿಕಲ್ ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುತ್ತಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಇನ್ನೂ 250 ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನ ನೀಡಬೇಕು ಎಂದು ಕೋರಿದರು.
ಡೀಮ್ಡ್ ಮೆಡಿಕಲ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳನ್ನು ನೀಡುತ್ತಿಲ್ಲವಾದ್ದರಿಂದ ಈ ಬಗ್ಗೆ ಕ್ರಮ ವಹಿಸಬೇಕಿದೆ. ಮೆಡಿಕಲ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸಬೇಕಿದ್ದು, ಈ ಬಗ್ಗೆಯೂ ಯೋಜನೆ ರೂಪಿಸಬೇಕಿದೆ. ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ವಿಜ್ಞಾನಗಳ ಸಂಸ್ಥೆ ಹಾಗೂ ನಸಿಂಗ್ ಸಂಸ್ಥೆ ಆರಂಭಿಸಬೇಕು. ಕೊರೊನಾ ಹೊಸ ವೈರಾಣು ಪತ್ತೆ ಮಾಡಲು ಜೀನೋಮ್ ಸೀಕ್ವೆನ್ಸ್ ಫಲಿತಾಂಶವನ್ನು ಶೀಘ್ರ ನೀಡಲು ಕ್ರಮ ಕೈಗೊಳ್ಳಬೇಕು. ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಖರೀದಿ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಇದೇ ವೇಳೆ ಮನವಿ ಮಾಡಲಾಯಿತು.
ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪಾಲ್ ಅವರೊಂದಿಗಿನ ಭೇಟಿ ವೇಳೆ, ಪಾಲ್ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ರಾಜ್ಯ ಸರ್ಕಾರ ಯೋಜನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಈ ಬಗ್ಗೆ ವೀಡಿಯೋ ಸಂವಾದ ನಡೆಸಿದರೆ, ದೇಶಾದ್ಯಂತ ಬೇರೆ ರಾಜ್ಯಗಳಿಗೂ ನೆರವಾಗಲಿದೆ ಎಂದು ಸಲಹೆ ನೀಡಿದರು. ಜೊತೆಗೆ ರಾಜ್ಯದ ಕೋವಿಡ್ ನಿರ್ವಹಣೆ ಬಗ್ಗೆ ಶ್ಲಾಘಿಸಿದರು.