Karnataka | ರಾಜ್ಯದಲ್ಲಿ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆ
ರಾಜ್ಯದಲ್ಲಿ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು : ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಾರ್ಚ್ 7 ರಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಮಾರ್ಚ್ 7ರಂದು ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಜೊತೆಗೆ ಮಾರ್ಚ್ 8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದಲ್ಲದೇ ಪಶ್ಚಿಮ ಘಟ್ಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಾರ್ಚ್ 7, 8, 9ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. karnataka-imd predicts rain fall in various districts from march 7 to march 9.









