ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ ಧರ್ಮ ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡುವ ಮೊದಲು ತಮ್ಮ ಮನೆಯಲ್ಲೇ ವಿಚಾರಿಸಲಿ ಎಂದು ಅವರು ಸಲಹೆ ನೀಡಿದ್ದಾರೆ.
ನಮ್ಮ ಸಂಸ್ಕೃತಿ ಏನು ಅಂತ ತಾಯಿ ತಿಳಿಸುತ್ತಾರೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಯತೀಂದ್ರ ಅವರು ಮೊದಲು ತಮ್ಮ ತಾಯಿಯ ಬಳಿ ಹೋಗಿ ನಾವು ಯಾರು? ನಮ್ಮ ಸಂಸ್ಕೃತಿ ಮತ್ತು ಧರ್ಮ ಯಾವುದು? ನಾವು ಯಾವ ಆಚರಣೆಗಳನ್ನು ಮಾಡುತ್ತೇವೆ ಎಂಬುದನ್ನು ಕೇಳಲಿ. ಆಗ ಅವರ ತಾಯಿಯೇ ಮಗನಿಗೆ ಎಲ್ಲವನ್ನೂ ವಿವರವಾಗಿ ತಿಳಿಸಿ ಹೇಳುತ್ತಾರೆ. ಈ ದೇಶದ ಮೂಲ ಸನಾತನ ಸಂಸ್ಕೃತಿ ಮತ್ತು ಧರ್ಮವನ್ನು ಯಾರು ಕಾಪಾಡುತ್ತಾರೋ ಅವರಿಗೆ ತಾಯಿ ಚಾಮುಂಡೇಶ್ವರಿ ಹೆಚ್ಚಿನ ಶಕ್ತಿ ನೀಡಲಿ ಎಂದು ಮಾರ್ಮಿಕವಾಗಿ ನುಡಿದರು.
ಇದೇ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಶೋಭಾ ಕರಂದ್ಲಾಜೆ ಕಳವಳ ವ್ಯಕ್ತಪಡಿಸಿದರು. ಇಡೀ ದೇಶದಲ್ಲೇ ಅತಿ ಹೆಚ್ಚು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿರುವುದು ಕರ್ನಾಟಕದಲ್ಲಿ ಮಾತ್ರ. ಅದರಲ್ಲೂ ವಿಶೇಷವಾಗಿ ನನ್ನ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. ಇದು ವ್ಯವಸ್ಥಿತವಾಗಿ ನಡೆಯುತ್ತಿರುವ ಪಿತೂರಿಯಂತೆ ಕಾಣುತ್ತಿದೆ ಎಂದು ಅವರು ಆರೋಪಿಸಿದರು.
ಜನರು ತಮ್ಮ ಉದ್ಯೋಗ ಅಥವಾ ಇತರೆ ಕಾರಣಗಳಿಗಾಗಿ ಬೇರೆಡೆ ಇದ್ದರೂ, ತಮ್ಮ ಸ್ವಂತ ಊರುಗಳಲ್ಲಿ ಮತದಾನದ ಹಕ್ಕನ್ನು ಹೊಂದಿರುತ್ತಾರೆ. ಕನ್ನಡಿಗರು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಅವರು ಕನ್ನಡಿಗರೇ ಆಗಿರುತ್ತಾರೆ. ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವುದು ಸರಿಯಲ್ಲ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದು ಅವರು ಒತ್ತಾಯಿಸಿದರು.








