ಮಂಡ್ಯ: ಕೇಂದ್ರ ಬೃಹತ್ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ (HD Kumaraswamy) ಅವರು ಕೋಮುಗಲಭೆ ಕ್ಷೇತ್ರ ನಾಗಮಂಗಲಕ್ಕೆ (Nagamangala) ಭೇಟಿ ನೀಡಿದ್ದಾರೆ.
ಈ ವೇಳೆ ಗಲಭೆಯಿಂದ (Nagamangala Violence) ಹಾನಿಗೊಳಗಾದ ಅಂಗಡಿಗಳಿಗೆ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಜಿ ಶಾಸಕರಾದ ಸುರೇಶ್ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಸೇರಿದಂತೆ ಹಲವರು ಇದ್ದರು.
ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವೇ ನಾಗಮಂಗಲ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.
ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.