ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ಭಾರತ ಸರ್ಕಾರದ ಬಗ್ಗೆ ನೀಡಿದ್ದ ಹೇಳಿಕೆಗಳ ಹಿನ್ನೆಲೆಯಲ್ಲಿ ಇದೀಗ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ವಿದೇಶಾಂಗ ಸಚಿವಾಲಯವು ಪರಾರಿಯಾದ ಎಲ್ಲ ವ್ಯಕ್ತಿಗಳನ್ನು ಭಾರತಕ್ಕೆ ಮರಳಿ ಕರೆತರುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದ ಕೆಲವೇ ದಿನಗಳಲ್ಲಿ ಲಲಿತ್ ಮೋದಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಅವರು, ಯಾರ ಭಾವನೆಗಳನ್ನು ನೋಯಿಸುವ ಉದ್ದೇಶ ನನಗಿರಲಿಲ್ಲ. ನನ್ನ ಮಾತುಗಳನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಹೇಳಿಕೆಗಳಿಂದ ಉಂಟಾದ ಗೊಂದಲ ಮತ್ತು ಟೀಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಲಲಿತ್ ಮೋದಿ, ಭಾರತ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ಪರಾರಿಯಾದ ಉದ್ಯಮಿ ವಿಜಯ್ ಮಲ್ಯ ಅವರ ಸಂಬಂಧಿತ ವಿಡಿಯೋ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಹಾಗೂ ಟೀಕೆಗಳು ನಡೆದಿದ್ದವು. ಈ ಬೆಳವಣಿಗೆಯ ನಂತರವೇ ಲಲಿತ್ ಮೋದಿ ತಮ್ಮ ಹೇಳಿಕೆಗಳನ್ನು ಹಿಂಪಡೆದು ಕ್ಷಮೆಯಾಚನೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಕ್ಷಮೆಯಾಚನೆ ರಾಜಕೀಯ ಮತ್ತು ಕಾನೂನು ವಲಯಗಳಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದ್ದು, ಪರಾರಿಯಾದವರ ವಿಚಾರದಲ್ಲಿ ಸರ್ಕಾರದ ನಿಲುವು ಹಾಗೂ ಕ್ರಮಗಳ ಬಗ್ಗೆ ಸಾರ್ವಜನಿಕ ಗಮನ ಸೆಳೆಯುವಂತಾಗಿದೆ.








