ಮಹಾರಾಷ್ಟ್ರದ (Maharashtra) ರಾಯಗಡ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭೂಕುಸಿತ ಸಂಭವಿಸಿದ್ದು, ಸುಮಾರು 48 ಕುಟುಂಬಗಳಿಗೆ ತೊಂದರೆಯಾಗಿದೆ.
ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಅನೇಕರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಿಳಿಸಿದೆ. ಎನ್ಡಿಆರ್ಎಫ್ನ ಎರಡು ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ರಾಯಗಢದ ಖಲಾಪುರ್ ತಹಸಿಲ್ನ ಇರ್ಶಲವಾಡಿ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಲ್ಲಿಯವರೆಗೆ 22 ಜನರನ್ನು ರಕ್ಷಿಸಲಾಗಿದ್ದು, ಹಲವರು ಅವಶೇಷಗಳೊಳಗೆ ಸಿಕ್ಕಿಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿದ್ದು. ಇದರ ಜತೆಗೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕೂಡ ರಾಯಗಢದಲ್ಲಿ ರಕ್ಷಣಾ ಕಾರ್ಯಾಚರಣೆ ಪರಿಶೀಲನೆ ನಡೆಸಿದ್ದಾರೆ.