ಬೆಂಗಳೂರು: ಸಾರ್ವಜನಿಕರಲ್ಲಿ ಸ್ವಾತಂತ್ರ್ಯ ಹೋರಾಟದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗಾ’ (Har Ghar Tiranga) ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಚಾಲನೆ ನೀಡಿದರು.
ಶಿವಾಜಿನಗರದ (Shivajinagara) ವಸಂತ ನಗರ ವಾರ್ಡ್ ನ ಬೂತ್ ನಂ.44ರಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯ (Independence Day) ಶುಭ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ಕ್ಷಣಗಳು ಗೊತ್ತಾಗುವಂತೆ ಮಾಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ಹೇಳಿದ್ದಾರೆ. ಹೀಗಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಸಂಸದ ಪಿ.ಸಿ.ಮೋಹನ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಸೇರಿದಂತೆ ಹಲವರು ಇದ್ದರು. ಅಲ್ಲದೇ, ಯುವಕರಿಂದ ಬೈಕ್ ರ್ಯಾಲಿ ಮೂಲಕ ತಿರಂಗಾ ಯಾತ್ರೆ ನಡೆಸಲಾಗುತ್ತಿದ್ದು, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
11 ರಿಂದ 15ರವರೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳು, ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಆಗಸ್ಟ್ 14ರಂದು ದೇಶದ ವಿಭಜನೆಯ ಕರಾಳ ದಿನದ ನೆನಪನ್ನು ವಿಭಜನೆಯ ಸ್ಮೃತಿ ದಿನವಾಗಿ ಆಚರಿಸಲಾಗುವುದು ಎಂದು ಹೇಳಿದರು.