ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕೇವಲ ಕಾಲ್ಪನಿಕ : ಅರುಣ್ ಸಿಂಗ್
ದೆಹಲಿ : ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಎಂಬುದು ಕೇವಲ ಕಾಲ್ಪನಿಕ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಕಾಟ, ಬ್ಲ್ಯಾಕ್ ಫಂಗಸ್ ಸಂಕಷ್ಟದ ಮಧ್ಯ ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕೂಗು ಜೋರಾಗಿಯೇ ಕೇಳಿಬರುತ್ತಿದೆ.
ಪದೇ ಪದೇ ನಾಯಕತ್ವ ಬದಲಾವಣೆ ಸುದ್ದಿ ಮುನ್ನೆಲೆಗೆ ಬರುತ್ತಿದ್ದ ಕಾರಣ, ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಹೈಕಮಾಂಡ್ ಕೇಳಿದ್ರೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿಕೆ ನೀಡಿದ್ದರು.
ಇದು ರಾಜ್ಯ ಬಿಜೆಪಿಯಲ್ಲಿ ಭಾರಿ ಸಂಚಲನವನ್ನೇ ಸೃಷ್ಠಿಸಿದೆ. ಸಿಎಂ ಈ ರೀತಿ ಹೇಳಿಕೆ ನೀಡುತ್ತಿದ್ದಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸಹಿ ಸಂಗ್ರಹದಂತ ಕಾರ್ಯಕ್ರಮಗಳು ನಡೆದಿವೆ.
ಸದ್ಯ ರಾಜ್ಯದಲ್ಲಿ ಬಿಜೆಪಿಯ ನಾಯಕತ್ವದ ಬದಲಾವಣೆ ಬೂದಿ ಮುಚ್ಚಿದ ಕೆಂಡದಂತಿದೆ.
ಈ ಮಧ್ಯೆ ಇದೇ ವಿಚಾರವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ; ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಎಂಬುದು ಕೇವಲ ಕಾಲ್ಪನಿಕ. ರಾಜ್ಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬಿಎಸ್‍ವೈ ಬದಲಾವಣೆ ಬಗ್ಗೆ ನಿರ್ಧಾರ ಮಾಡಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಬದಲಾವಣೆಯ ನಿರ್ಧಾರ ಮಾಡಿಲ್ಲ ಎಂದಿದ್ದಾರೆ.