ಆಗಸ್ಟ್ 31 ರವರೆಗೆ ಮಹಾರಾಷ್ಟ್ರ ಲಾಕ್-ಡೌನ್ ವಿಸ್ತರಣೆ
ಮುಂಬೈ, ಜುಲೈ 30: ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಬುಧವಾರ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಕೋವಿಡ್-19 ಹರಡುವುದನ್ನು ತಡೆಗಟ್ಟಲು ಒಳಗೊಂಡಿರುವ ತುರ್ತು ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮಿಷನ್ ಬಿಗಿನ್ ಎಗೇನ್ ಉಪಕ್ರಮದ ಭಾಗವಾಗಿ, ಚಿತ್ರಮಂದಿರಗಳು, ಆಹಾರ ಮಳಿಗೆಗಳು, ನ್ಯಾಯಾಲಯಗಳು, ರೆಸ್ಟೋರೆಂಟ್‌ಗಳಿಲ್ಲದ ಮಾಲ್‌ಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳು ಆಗಸ್ಟ್ 5 ರಿಂದ ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಅಧಿಸೂಚನೆ ತಿಳಿಸಿದೆ.
ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕಳೆದ ತಿಂಗಳು ಜುಲೈ 31 ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ.
ಮಹಾರಾಷ್ಟ್ರದಲ್ಲಿ ಬುಧವಾರ 9,211 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿಯವರೆಗೆ ಪತ್ತೆಯಾದ ಕೊರೋನವೈರಸ್ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷ ದಾಟಿದೆ.
ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 4,00,651 ಕ್ಕೆ ತಲುಪಿದ್ದರೆ, ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 14,463 ಕ್ಕೆ ಏರಿದ್ದು, 298 ರೋಗಿಗಳು ಬುಧವಾರ ಸಾವನ್ನಪ್ಪಿದ್ದಾರೆ. ಅವರಲ್ಲಿ 60 ಮಂದಿ ಮುಂಬೈನಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.
7,478 ರೋಗಿಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ರಾಜ್ಯದಲ್ಲಿ ಚೇತರಿಸಿಕೊಂಡ ಪ್ರಕರಣಗಳ ಸಂಖ್ಯೆ 2,39,755 ಕ್ಕೆ ತಲುಪಿದೆ.
ಮಹಾರಾಷ್ಟ್ರದಲ್ಲಿ ಈಗ 1,46,129 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೆ ಒಟ್ಟು 20,16,234 ಜನರನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರ ಪ್ರದೇಶಗಳಲ್ಲಿ ಕ್ರಮವಾಗಿ 1,109 ಮತ್ತು 3,324 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ರಾಜ್ಯದ ರಾಜಧಾನಿಯಲ್ಲಿ ಪ್ರಕರಣಗಳ ಸಂಖ್ಯೆ 1,11,991 ಮತ್ತು ಸಾವಿನ ಸಂಖ್ಯೆ 6,247 ಆಗಿದೆ.