ಕಾಂಗ್ರೆಸ್ ತನ್ನ ಮುಂದಿನ ಸಿಎಂ ಅಭ್ಯರ್ಥಿ ಖರ್ಗೆ ಎಂದು ಘೋಷಿಸಲಿ : ಕಟೀಲ್
ಚಿತ್ರದುರ್ಗ : ಕಾಂಗ್ರೆಸ್ ನಾಯಕರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ಮುಂದಿನ ಸಿಎಂ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಎಂದು ಘೋಷಿಸಲಿ ಅಂತಾ ಕಾಂಗ್ರೆಸ್ ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲ್ ಹಾಕಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಕಟೀಲು, ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಬಾದಾಮಿ ಕ್ಷೇತ್ರಕ್ಕೆ ಬಂದಿದ್ದರು. ಈಗ ಬಾದಾಮಿ ಕ್ಷೇತ್ರವನ್ನು ತೊರೆಯುವ ಹಂತದಲ್ಲಿದ್ದಾರೆ. ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಕಾಂಗ್ರೆಸ್ ನಲ್ಲಿ ಪೈಪೋಟಿ ಆರಂಭವಾಗಿದೆ.
ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿಯೇ ಗೆಲುವು ಸಾಧಿಸಲಿದ್ದು, ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಿಕೆಶಿಯವರನ್ನು ಮುಗಿಸುವ ತಂತ್ರವನ್ನು ಸಿದ್ದರಾಮಯ್ಯ ಹೆಣೆಯುತ್ತಿದ್ದಾರೆ. ಸ್ವಜಾತಿಯವರನ್ನು ಬಳಸಿ ಡಾ.ಪರಮೇಶ್ವರ್ ಅವರನ್ನು ಸೋಲಿಸಿದರು. ಸಿಎಂ ಸ್ಥಾನಕ್ಕೆ ಪ್ರತಿಸ್ಪರ್ಧಿ ಇರಬಾರದು ಎಂದು ಷಡ್ಯಂತ್ರ ನಡೆಸಿದರು. ಕಾಂಗ್ರೆಸ್ ನಾಯಕರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ಮುಂದಿನ ಸಿಎಂ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಎಂದು ಘೋಷಿಸಲಿ ಎಂದು ಸವಾಲು ಹಾಕಿದರು.










