ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಚಿತ್ತ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಮೇಲೆ ಬಿದ್ದಿದೆ ಎನ್ನಲಾಗಿದೆ.
ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ವಿರುದ್ಧ ಕೇಳಿ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಗೆಹ್ಲೋಟ್ (Thawar Chand Gehlot) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಖರ್ಗೆ ಕುಟುಂಬಸ್ಥರ ಮಾಲೀಕತ್ವದಲ್ಲಿರುವ ಸಿದ್ಧವಿಹಾರ ಟ್ರಸ್ಟ್ ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ಸಿಎ ನಿವೇಶನ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಮತ್ತೋರ್ವ ಸಚಿವರಿಗೆ ಸಂಕಷ್ಟ ಶುರುವಾದಂತಾಗಿದೆ.
ಕೆಐಎಡಿಬಿ ಸಿಎ ನಿವೇಶನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿತ್ತು.
ಮಾರ್ಚ್ 5ರಂದು ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಳ್ಳಲಾಗಿತ್ತು. ಮಾರ್ಚ್ 6ರಂದುಹಂಚಿಕೆ ಮಾಡಲಾಗಿತ್ತು. ಇಷ್ಟೊಂದು ತರಾತುರಿಯಲ್ಲ ಏಕೆ ಮಾಡಲಾಯಿತು ಎಂದು ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದರು. ಈ ಕುರಿತು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಸದ್ಯ ಈ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ಇದು ರಾಜಕೀಯ ದ್ವೇಷ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.