ಮಂಡ್ಯ | ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆಗೆ ಬಿಎಸ್ ವೈ ಬೇಸರ
ಮಂಡ್ಯ : ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಬೂಕಹಳ್ಳಿ ಮಂಜು ಕೇವಲ 50 ಮತ ಪಡೆದು ಕಳಪೆ ಸಾಧನೆ ಮಾಡಿರುವ ಬಗ್ಗೆ ವರದಿ ಪಡೆದಿದ್ದೇನೆ.
ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಸಚಿವ ನಾರಾಯಣಗೌಡ ಅವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮೈಸೂರಿನಿಂದ ಶಿವಮೊಗ್ಗಕ್ಕೆ ಹೋಗುವ ಮಾರ್ಗದಲ್ಲಿ ಕೆ.ಆರ್.ಪೇಟೆ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಯಡಿಯೂರಪ್ಪ ಅವರನ್ನು ಮೂಢಾ ಅಧ್ಯಕ್ಷ ಕೆ.ಶ್ರೀನಿವಾಸ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಶಾಸಕರಾದ ಜಿಲ್ಲಾ ಉಸ್ತಿವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.
ತಾಲ್ಲೂಕಿನ ರೈತಾಪಿ ವರ್ಗದ ಕಲ್ಯಾಣಕ್ಕಾಗಿ ಹಲವಾರು ಏತ ನೀರಾವರಿ ಮತ್ತು ಕುಡಿಯುವ ನೀರು ಸರಬರಾಜು ಯೋಜನೆಗಳು ಮಂಜೂರಾಗಿವೆ ಎಂದರು.
ಸದ್ಯದಲ್ಲಿಯೇ ಕೆ.ಆರ್.ಪೇಟೆ ತಾಲೂಕುಗಳ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿಸಲು ಗಮನ ಹರಿಸುತ್ತೇನೆ ಎಂದು ತಿಳಿಸಿದ್ದಾರೆ.