ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಎಚ್.ಕೆ. ಪಾಟೀಲ್, ಹೆಚ್‌ಎಂಟಿ ಅಧೀನದಲ್ಲಿ ಇರುವ ಅರಣ್ಯ ಭೂಮಿ ಹಿಂಪಡೆಯುವ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ.
ಹೆಚ್‌ಎಂಟಿ ಕಂಪನಿ (HMT Company) ಕೆಲವು ಅರಣ್ಯ ಭಾಗವನ್ನು ಬೇರೆ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಕಂಪನಿಯು ಸುಮಾರು 160 ಎಕರೆ ಭೂಮಿಯನ್ನು 375 ಕೋಟಿ ರೂ.ಗೆ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಮಾರಾಟ ಸಂದರ್ಭದಲ್ಲಿ ಅರಣ್ಯ ಇಲಾಖೆ, ಅರಣ್ಯ ಸಚಿವರು ಯಾರಿಂದಲೂ ಅನುಮತಿ ಪಡೆದಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
180 ಎಕರೆ ಅರಣ್ಯ ಭೂಮಿಯನ್ನು ಇದೀಗ ಮಾರಾಟ ಮಾಡಲು ಹೊರಟಿದ್ದಾರೆ. ಅಲ್ಲದೇ ಮೊದಲೇ 160 ಎಕರೆ ಮಾರಾಟ ಆಗಿದ್ದು, ಅದೂ ಅರಣ್ಯ ಭೂಮಿ ಡಿನೋಟೀಫೈ ಆಗಿಲ್ಲ. ಈ ಪ್ರಶ್ನಾರ್ಹ ಭೂಮಿಯನ್ನು ಡಿನೋಟಿಫೈ ಮಾಡುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. 2015ರಲ್ಲಿ ಸಮಸ್ಯೆ ಬಗೆಹರಿಸಲು ಉನ್ನತ ಮಟ್ಟದ ಸಮಿತಿ ಕೂಡ ರಚಿಸಲಾಗಿತ್ತು. ಅರಣ್ಯ ಭೂಮಿ ಡಿನೋಟಿಫೈ ಮಾಡಿದರೆ ರಾಜ್ಯಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗುತ್ತದೆ ಎಂದಿದ್ದಾರೆ.