ಶಾಲೆಯಲ್ಲಿ ಹಾಲು ಸೇವಿಸಿ ಹಲವು ವಿದ್ಯಾರ್ಥಿಗಳು ಅಸ್ವಸ್ಥ…
ಶಾಲೆಯಲ್ಲಿ ಕ್ಷೀರ ಭಾಗ್ಯ ಯೋಜನೆಯ ಹಾಲು ಸೇವಿಸಿ ಹನ್ನೆರಡಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಹಾವೇರಿ ಜಿಲ್ಲೆ ನಡೆದಿದೆ.
ಶಿಗ್ಗಾಂವಿ ತಾಲೂಕಿನ ದುಂಡಶಿ ಗ್ರಾಮದ ವಿವೇಕಾನಂದ ಪ್ರೌಢಶಾಲೆಯಲ್ಲಿ ಘಟನೆ ನಡೆದಿದ್ದು, ಶಾಲೆಯಲ್ಲಿ ಒಟ್ಟು 174 ವಿದ್ಯಾರ್ಥಿಗಳಿಗೆ ಹಾಲು ನೀಡಲಾಗಿತ್ತು. ಅದರಲ್ಲಿ ಓರ್ವ ವಿದ್ಯಾರ್ಥಿನಿಗೆ ವಾಂತಿಯಾಗಿದ್ದು, ಇನ್ನು ಕೆಲವು ವಿದ್ಯಾರ್ಥಿಗಳಿಗೆ ಹೊಟ್ಟೆತೊಳಸಿದಂತಹ ಅನುಭವವಾಗಿದೆ. 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಐದು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾಲೆಯಲ್ಲಿ ಮದ್ಯಾಹ್ನದ ಬಿಸಿಯೂಟದ ಜೊತೆಗೆ ನೀಡಲಾಗಿದ್ದ ಹಾಲು ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.