ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.
ಎರಡು ಕಾರು, ಒಂದು ಟ್ಯಾಂಕರ್ ಸೇರಿದಂತೆ 6 ವಾಹನಗಳು ಮಣ್ಣನಡಿ ಸಿಲುಕಿವೆ ಎಂದು ತಿಳಿದು ಬಂದಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಉಂಟಾಗಿದೆ. ಕಳೆದ 15 ದಿನಗಳಿಂದಲೂ ಈ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಹೀಗಾಗಿ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ. ಹೀಗಾಗಿ ಆತಂಕ ಮನೆ ಮಾಡಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಉಪ್ಪಿನಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ನೇತ್ರಾವತಿ ನದಿಯ ನೀರು ಬಂದಿದೆ. ರಸ್ತೆ ಮೇಲೆಯೇ ನದಿ ನೀರು ಹರಿಯುತ್ತಿರುವುದರಿಂದ ಮಂಗಳೂರು ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ಥವಾಗಿದೆ.








