ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ನೀಡದಿದ್ರೆ ಹೋರಾಟ -ಎಮ್. ಸಿ. ವೇಣುಗೋಪಾಲ್
ಬೆಂಗಳೂರು – ಮಾರ್ಚ್ 5-
ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಲೇಬೇಕು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೊದಲು ಸರ್ಕಾರ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಂ.ಸಿ. ವೇಣುಗೋಪಾಲ್ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಈಗಾಗಲೇ ಒರಿಸ್ಸಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ
ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡದೇ ಚುನಾವಣೆಗಳನ್ನು ನಡೆಸಲಾಗಿದೆ. ಅದೇ ರೀತಿ
ಕರ್ನಾಟಕದಲ್ಲಿ ಆಗಬಾರದು. ಚುನಾವಣೆಗೆ ಮುನ್ನವೇ ಮೀಸಲಾತಿಯನ್ನು ಜಾರಿಗೊಳಿಸಬೇಕು. ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಹಾಗೂ ಸರ್ವೋಚ್ಚ
ನ್ಯಾಯಾಲಯದ ನಿರ್ದೇಶನದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ನೀಡಲು
ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈಗಾಗಲೇ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಪ್ರಮುಖ ಐದು
ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರ ಮತ್ತು ಸಂಬಂಧ ಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದೆ. ಮುಖ್ಯವಾಗಿ ಸ್ಥಳಿಯ ಸಂಘ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ, ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರಿಸಬಾರದು. ಹೆಚ್. ಕಾಂತರಾಜು
ವರದಿಯನ್ನು ಜಾರಿಗೊಳಿಸಬೇಕು. ಸುಭಾಷ್ ಆಡಿ ಸಮಿತಿಯನ್ನು ರದ್ದುಗೊಳಿಸಬೇಕು, ಕೇಂದ್ರ
ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 73 ಜಾತಿ – ಉಪಜಾತಿಗಳನ್ನು
ಸೇರಿಸಬೇಕು ಎಂಬುದರ ಬಗ್ಗೆ ಈಗಾಗಲೇ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು. ಅಲ್ಲದೆ ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಸಮರ್ಪಕವಾದ ಉತ್ತರಗಳು ಬಂದಿಲ್ಲ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸುವುದರ ಜೊತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಂ. ಸಿ. ವೇಣುಗೋಪಾಲ್ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.
ಇದೇ ವೇಳೆ ವಸತಿ ಸೌಲಭ್ಯದಿಂದ ವಂಚಿತರಾದ ಅತಿ ಹಿಂದುಳಿದ ವರ್ಗಗಳಿಗೆ ವಸತಿ ಸೌಕರ್ಯಗಳನ್ನು
ಕಲ್ಪಿಸುವಂತೆ ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಕೂಡ ಸಲ್ಲಿಸಲಾಗುವುದು ಎಂದು ವೇಣುಗೋಪಾಲ್ ತಿಳಿಸಿದ್ರು.
ಇನ್ನು ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕರ್ನಾಟಕ
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ.ಜೆ. ಪುಟ್ಟ
ಸ್ವಾಮಿ, ಹಿಂದುಳಿದ ವರ್ಗಗಳ ಒಕ್ಕೂಟದ ಮಾಜಿ ಅಧ್ಯಕ್ಷ ಜೆ. ಶ್ರೀನಿವಾಸನ್, ಕರ್ನಾಟಕ ರಾಜ್ಯ ಈಡಿಗರ
ಸಂಘದ ಅಧ್ಯಕ್ಷ ಎಂ. ತಿಮ್ಮೇಗೌಡ, ಕಾರ್ಯದರ್ಶಿ ಎಚ್.ಟಿ. ಮೋಹನ್ ದಾಸ್, ಕರ್ನಾಟಕ ರಾಜ್ಯ
ಶೆಟ್ಟಿಗಾರ್ ಸಮಾಜದ ಅಧ್ಯಕ್ಷೆ ಡಿ. ಭಾನುಮತಿ ಶೆಟ್ಟಿಗಾರ್, ಕಾಯಕ
ಸಮಾಜದ ಮುಖಂಡರಾದ ಸಂದೇಶ್, ಪ್ರವೀಣ್ ಪವರ್, ವಿಶ್ವಕರ್ಮ
ಸಮಾಜ, ಸವಿತಾ ಸಮಾಜದ ಮುಖಂಡರನ್ನು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ
ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಸನ್ಮಾನಿಸಲಾಯ್ತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ
ಎಂ. ನಾಗರಾಜ್, ಖಜಾಂಚಿ ಎಲ್.ಎ. ಮಂಜುನಾಥ್, ಸಲಹೆಗಾರರಾದ ಲಿಂಗಪ್ಪ, ನಿವೃತ್ತ ಐಎಎಸ್ ಅಧಿಕಾರಿಗಳಾದ ಪಿ.ಎನ್. ಶ್ರೀನಿವಾಸಾಚಾರಿ. ಕೆ.ಆರ್.ನಿರಂಜನ್, ಕೆ.ಎಸ್.ಪ್ರಭಾಕರ್, ಬಿಜೆಪಿ ಮುಖಂಡ ನೆ.ಲ. ನರೇಂದ್ರ ಬಾಬು ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.