ದಕ್ಷಿಣ ಕನ್ನಡದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ: ಶ್ರೀನಿವಾಸ ಪೂಜಾರಿ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ಚರ್ಚಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತಂತೆ ಡಿಸಿಎಂ ಅಶ್ವಥ್ ನಾರಾಯಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೂಜಾರಿ ಅವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲು 25 ಸಾವಿರ ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ ಗಳನ್ನು ಜಿಲ್ಲೆಗೆ ಸರಬರಾಜು ಮಾಡಲಾಗುವುದು. 15 ಆಂಬುಲೆನ್ಸ್ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು. ಕೊರೊನಾ ಸೋಂಕಿತರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು. ಚಿಕಿತ್ಸಾ ವೆಚ್ಚವನ್ನೂ ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಜಿಲ್ಲೆಯ ನೆರವಿಗೆ ಬಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅವರಿಗೆ ಶ್ರೀನಿವಾಸ ಪೂಜಾರಿ ಅವರು ಕೃತಜ್ಞತೆ ಸಲ್ಲಿಸಿದರು.








