ಬೆಂಗಳೂರು: ಬೆಂಗಳೂರು ನಗರದ ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದೇ ವೈದ್ಯರು ಹಾಗೂ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕಳೆದ ರಾತ್ರಿ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲು ವಿಕ್ಟೋರಿಯಾ ಆಸ್ಪತ್ರೆಗೆ ಕೋವಿಡ್ ವಾರ್ಡ್‍ಗೆ ಭೇಟಿ ನೀಡಿದ ಸಚಿವ ಸುಧಾಕರ್, ಚಿಕಿತ್ಸೆ ಹಾಗೂ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ತೋರಿದ ಅಧಿಕಾರಿ, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
ನಂತರ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಸುಧಾಕರ್, ಸಿಬ್ಬಂದಿ ಹಾಜರಾತಿ, ಚಿಕಿತ್ಸಾ ಸೌಲಭ್ಯಗಳ ಪರಿಶೀಲನೆ ನಡೆಸಿದರು. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಜತೆಯೂ ಸಮಾಲೋಚನೆ ನಡೆಸಿದ ಸಚಿವರು, ಕೋವಿಡ್ ಕರ್ತವ್ಯದಲ್ಲಿ ನಿರತರಾದವರಿಗೆ ಒದಗಿಸುತ್ತಿರುವ ಸುರಕ್ಷತಾ ಉಪಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕೋವಿಡ್ ಕರ್ತವ್ಯದಲ್ಲಿ ನಿರತರಾಗಿರುವ ಎಲ್ಲಾ ಕೊರೊನಾ ಯೋಧರ ಸುರಕ್ಷತೆ ಕಾಪಾಡುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಸುರಕ್ಷತಾ ಉಪಕರಣಗಳನ್ನು ಒದಗಿಸುವುದರಲ್ಲಿ ಲೋಪ ಕಂಡು ಬಮದರೆ ಆಸ್ಪತ್ರೆಗಳ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.









