ಉಮೇಶ್ ಕತ್ತಿ ನಿಧನದ ಹಿನ್ನಲೆ – ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ…
ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನಲೆಯಲ್ಲಿ ನಾಳೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 11 ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಸಚಿವ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಬಂಧ ಮಾ ಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕತ್ತಿಯವರು ನಮ್ಮನ್ನೆಲ್ಲ ಅಗಲಿದ್ದಾರೆ. ಬಹಳ ನೋವಿನ ಸಂಗತಿ ಇದು. ನಾವೆಲ್ಲ ಶೋಕದಲ್ಲಿದೀವಿ, ರಾಜ್ಯದಲ್ಲಿ ಶೋಕಾಚರಣೆ ಇದೆ. ಈ ಕಾರಣದಿಂದ ನಾಳೆ ಜನೋತ್ಸವ ನಡೆಯಲ್ಲ. ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ನಿರ್ಧರಿಸಿದ್ದೇವೆ. ಜನೋತ್ಸವಕ್ಕೆ ಬರುವ ಕಾರ್ಯಕರ್ತರು ಮುಖಂಡರು ಭಾನುವಾರ ಬರಬೇಕಾಗಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬಿಜೆಪಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಾಗ ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 8 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಅರಣ್ಯ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ ಹೊಂದಿದ ಹಿನ್ನೆಲೆ ಜನೋತ್ಸವ ಕಾರ್ಯಕ್ರಮವನ್ನು ಸೆ. 11 ಭಾನುವಾರಕ್ಕೆ ಮುಂದೂಡಲಾಗಿದೆ.