ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್ ಜಿ.ದುರ್ಗಣ್ಣ ಅಮಾನತುಗೊಂಡಿರುವ ಅಧಿಕಾರಿಗಳು. ಇಬ್ಬರನ್ನೂ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿಗಮದ ಮುಖ್ಯ ಖಾತೆಯಲ್ಲಿ ಮೀಸಲಿಟ್ಟಿದ್ದ 187 ಕೋಟಿ ರೂ. ಮೊತ್ತದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ 88 ಕೋಟಿ ರೂ. ಹಣವನ್ನು ಅನ್ಯ ಖಾತೆಗೆ ವರ್ಗಾಯಿಸಿ ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧೀಕ್ಷಕ ಚಂದ್ರಶೇಖರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ನೋಟ್ನಲ್ಲಿ ಇಬ್ಬರು ಅಧಿಕಾರಿಗಳು ಮತ್ತು ಬ್ಯಾಂಕ್ ಉದ್ಯೋಗಿಯೊಬ್ಬರ ಹೆಸರು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿಯೇ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಲಾಖಾ ಸಚಿವರು, ನಿಗಮದ ಅಧ್ಯಕ್ಷರು, ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ಯೂನಿಯನ್ ಆಫ್ ಇಂಡಿಯಾದ ಅಧಿಕೃತ ಖಾತೆಗೆ ವರ್ಗಾಯಿಸಲಾದ ಹಣ ಹಿಂಪಡೆಯುವ ಕಾರ್ಯವನ್ನೂ ಅಧಿಕಾರಿಗಳು ಮಾಡಿದ್ದಾರೆ.