ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವಂತಹ ಮಹತ್ವದ ಘೋಷಣೆ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಯತ್ನಾಳ್, ತಾವು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮ ಪುತ್ರನ ಮದುವೆಗೆ ಆಹ್ವಾನ ನೀಡುವ ಸಲುವಾಗಿ ಮಾತ್ರ ದೆಹಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಅವರಂತಹ ಕಡು ಭ್ರಷ್ಟ ಕುಟುಂಬ ಬಿಜೆಪಿ ಒಳಗೆ ಇರುವವರೆಗೂ ನಾನು ಪಕ್ಷಕ್ಕೆ ಸೇರುವುದನ್ನು ಇಷ್ಟಪಡುವುದಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.
ಸೂಕ್ತ ಸಮಯದಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪನೆ ಕುರಿತು ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ಕಾರಣವಾಗಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.








