ಸುಶಾಂತ್ ಸಾವು ಪ್ರಕರಣ- ಸಿಬಿಐ ತನಿಖೆ ಒತ್ತಾಯಿಸಿ ಸುಬ್ರಮಣಿಯನ್ ಸ್ವಾಮಿ ಬರೆದ ಪತ್ರಕ್ಕೆ ಪ್ರಧಾನಿ ಮೋದಿ ಅಂಗೀಕಾರ
ಹೊಸದಿಲ್ಲಿ, ಜುಲೈ 27: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿ ಬಿಜೆಪಿ ನಾಯಕ ಡಾ.ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಸುಮಾರು ಒಂದು ವಾರದ ನಂತರ, ಪ್ರಧಾನಿ ಈ ಪತ್ರವನ್ನು ಅಂಗೀಕರಿಸಿದ್ದಾರೆ. ಪಿಎಂ ಮೋದಿ ಈಗ ಸ್ವಾಮಿಗೆ ಮತ್ತೆ ಪತ್ರ ಬರೆದಿದ್ದಾರೆ.
“ನಿಮ್ಮ ಜುಲೈ 15, 2020 ರ ಪತ್ರವನ್ನು ನಾನು ಅಂಗೀಕರಿಸಿದ್ದೇನೆ” ಎಂದು ಪ್ರಧಾನಿ ಮೋದಿಯವರು ಪತ್ರವನ್ನು ಓದಿ ಸುಬ್ರಮಣಿಯನ್ ಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ಪಿಎಂ ಮೋದಿಯನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ತನ್ನ ನಿವಾಸದಲ್ಲಿ
ಮೃತಪಟ್ಟಿದ್ದಾರೆ. ಸುಶಾಂತ್ ಅವರ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗಿದೆ.ಇದು ಅಸಹಜ ಸಾವು, ಇದರ ಬಗ್ಗೆ ಸಿಬಿಐ ತನಿಖೆ ನಡೆಸಬೇಕು. ದುಬೈನ ಡಾನ್ ಗಳ ಸಹಾಯದಿಂದ ಬಾಲಿವುಡ್ ನ ಖ್ಯಾತರು ಸಾವನ್ನು ಮುಚ್ಚಿಹಾಕಲು ಮತ್ತು ಅದನ್ನು ಸ್ವಯಂಪ್ರೇರಿತ ಆತ್ಮಹತ್ಯೆ ಎಂದು ಬಿಂಬಿಸಲು ನೋಡುತ್ತಿದ್ದಾರೆ ಎಂದು ಅವರು ಹೇಳಿದ್ದರು.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು . ಮುಂಬೈ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಸುಶಾಂತ್ ಸಿಂಗ್ ಅವರ ಕೊನೆಯ ಚಿತ್ರ ದಿಲ್ ಬೆಚಾರ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಿದ್ದು ಚಿತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.








