ಬೆಂಗಳೂರು : ರಾಜ್ಯಮಟ್ಟದ ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರ ಮಾಡಿ, ಇದನ್ನು ಗಂಭೀರವಾಗಿ ಪರಿಗಣಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಖಡಕ್ ಆಗಿ ಸೂಚನೆ ನೀಡಿದ್ದಾರೆ.
ಇಂದು ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳ ಪ್ರಗತಿ. ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯಮಟ್ಟದ ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರ ಮಾಡಿ, ಇದನ್ನು ಗಂಭೀರವಾಗಿ ಪರಿಗಣಿಸಿ, ಮುಂದೆ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಾನೇ ಖುದ್ದಾಗಿ ಕೇಳುತ್ತೇನೆ ಎಂದು ಅಧಿಕಾರಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಲದೆ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು. ಇಂಜಿನಿಯರ್ ಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನಿರುದ್ಯೋಗಿ ಇಂಜಿನಿಯರ್ ಗಳನ್ನು ಟ್ರೈನಿಗಳೆಂದು ನೇಮಕ ಮಾಡಿ. ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಜಮೀನನ್ನು ಈಗಾಗಲೇ ಗುರುತಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಂತರ್ಜಲ ವೃದ್ಧಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಸೇತುವೆಗಳ ತಳಭಾಗದಲ್ಲಿ ಒಂದು ಮೀಟರ್ ತಡೆಗೋಡೆ ನಿರ್ಮಿಸಿ ನೀರಿನ ಸಂಗ್ರಹಣೆ ಮಾಡಲು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯದಲ್ಲಿ ವಿವಿಧ ಇಂಜಿನಿಯರಿಂಗ್ ಇಲಾಖೆಗಳ ದರಪಟ್ಟಿಯನ್ನು ಪರಿಶೀಲಿಸಿ ರಾಜ್ಯಾದ್ಯಾಂತ ಏಕರೂಪ ದರಪಟ್ಟಿಯನ್ನು ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ವರದಿ ಸಲ್ಲಿಸಲಿದ್ದಾರೆ. ಏಕರೂಪ ದರಪಟ್ಟಿ ಹೊರಬಂದಲ್ಲಿ ಇಲಾಖೆಗೆ ನೂರಾರು ಕೋಟಿ ರೂ.ಗಳನ್ನು ಸರ್ಕಾರಕ್ಕೆ ಉಳಿಸಬಹುದು ಎಂದು ಹೇಳಿದ್ದಾರೆ.
ಸಭೆಯಲ್ಲಿ ರಾಜ್ಯದಲ್ಲಿ ಪ್ರವಾಹ ಕಾಮಗಾರಿಗಳನ್ನು 500 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಪ್ರವಾಹದಿಂದ ಹಾಳಾಗಿರುವ 1800 ರಸ್ತೆಗಳು ಕಾಮಾಗಾರಿಗಳ ಪೈಕಿ 1700 ಕಾಮಗಾರಿಗಳು ಪೂರ್ಣಗೊಂಡಿವೆ. ಸೇತುವೆ ನಿರ್ಮಾಣ, ದುರಸ್ಥಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜೊತೆಗೆ ರಾಜ್ಯದ 1650 ಕೀ.ಮೀ ಉದ್ದದ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮಾಡವುದು. 10.110 ಕೀ ಮೀ ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.








