ಮೈಸೂರು: ಪ್ರಸಕ್ತ ವರ್ಷದ ಮೈಸೂರು ದಸರಾ (Mysuru Dasara 2024) ಉದ್ಘಾಟಿಸಲು ಸಾಹಿತಿ ಹಂ.ಪ.ನಾಗರಾಜಯ್ಯ (Hampa Nagarajaiah) ಅವರನ್ನು ಆಹ್ವಾನಿಸಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ. ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕರು. ಅವರು ‘ಹಂಪನಾ’ ಕಾವ್ಯನಾಮದಿಂದ ಕೃತಿಗಳನ್ನು ರಚಿಸುತ್ತಾರೆ. ಅವರು ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸಂದ್ರದವರು.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು, ಮಂಡ್ಯ, ದಾವಣಗೆರೆ, ಶಿವಮೊಗ್ಗ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸಿದರು. ಸೆಂಟ್ರಲ್ ಕಾಲೇಜಿಗೆ ಸೇರಿದ ಅವರು ನಂತರ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. ಹಲವಾರು ಕೃತಿಗಳನ್ನು ಅವರು ರಚಿಸಿದ್ದಾರೆ.
ಹಂಪನಾ ಅವರ ಸಾಹಿತ್ಯ ಸೇವೆಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಚಾವುಂಡರಾಯ ಪ್ರಶಸ್ತಿ, ಕಾವ್ಯಾನಂದ ಪುರಸ್ಕಾರ, ತಮ್ಮಣರಾವ ಅಮ್ಮಿನಭಾವಿ ಸ್ಮಾರಕ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.