ಮಂಡ್ಯ: ನಾಗಮಂಗಲ ಕೋಮುಗಲಭೆ ವಿಷಯ ಈಗ ರಾಜಕೀಯ ಚರ್ಚೆಗೂ ಕಾರಣವಾಗುತ್ತಿದೆ. ಕೇಂದ್ರ ಬೃಹತ್ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ (HD Kumaraswamy) ನಾಗಮಂಗಲಕ್ಕೆ (Nagamangala) ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಲಭೆಯಿಂದ (Nagamangala Violence) ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿದ ಕುಮಾರಸ್ವಾಮಿ, ಅಂಗಡಿ ಮಾಲೀಕರ ನೋವು ಕೇಳಿದರು. ಈ ಘಟೆ ನಡೆಯುತ್ತಿದ್ದಂತೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದರು. ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವೇ ನಾಗಮಂಗಲ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಶಾಂತಿ ಸುವ್ಯವಸ್ಥೆ ವೈಫಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ. ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.