ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಮರುಪರೀಕ್ಷೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.
‘ದಿ ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್’ ಪರವಾಗಿ ವಕೀಲ ತನ್ವಿ ದುಬೆ ಅವರು ಸುಪ್ರೀಂ ಕೋರ್ಟ್ನಲ್ಲಿ ಈ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, ಪರೀಕ್ಷೆ ನಡೆಸುವ ಸಂಸ್ಥೆಯಾದ NTA ಯ ಸಾಂಸ್ಥಿಕ ವೈಫಲ್ಯಗಳ ಬಗ್ಗೆ ಗಂಭೀರ ಆರೋಪ ಮಾಡಲಾಗಿದೆ.
NEET-UG 2026 ಪರೀಕ್ಷೆಯ ಪ್ರಾಮಾಣಿಕತೆ ಮೇಲೆ ಅನುಮಾನ ಮೂಡಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇದಕ್ಕೆ ಸಂಬಂಧಿಸಿದೆ. ಆದ್ದರಿಂದ ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಇದೇ ವೇಳೆ, NTA ಕಾರ್ಯವೈಖರಿ ಬಗ್ಗೆ ಪ್ರಶ್ನೆ ಎತ್ತಲಾಗಿದ್ದು, ಸಂಸ್ಥೆಯನ್ನು ಮರುಸಂಘಟಿಸುವ ಅಗತ್ಯವಿದೆ ಎಂದು ಕೂಡ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಹೆಚ್ಚಾಗಿದ್ದು, ದೇಶದಾದ್ಯಂತ ಈ ವಿಷಯ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಪರೀಕ್ಷಾ ವ್ಯವಸ್ಥೆಯ ಭದ್ರತೆ, ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಯಾವ ರೀತಿಯ ತೀರ್ಪು ನೀಡುತ್ತದೆ ಎಂಬುದರತ್ತ ಈಗ ಎಲ್ಲರ ಗಮನ ನೆಟ್ಟಿದೆ.








