ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ.
ಇಸ್ರೇಲ್ ಭಾರತದಲ್ಲಿ ಹೆಚ್ಚಿನ ಹೂಡಿಕೆ ಮಾಡುತ್ತಿದೆ ಎಂದು ತಿಳಿಸಿ, ಉಭಯ ದೇಶಗಳ ನಡುವಿನ ಆರ್ಥಿಕ ಹಾಗೂ ಕಾರ್ಯತಂತ್ರದ ಸಹಕಾರ ಮತ್ತಷ್ಟು ವಿಸ್ತರಿಸುತ್ತಿದೆ ಎಂದರು.
ಇಸ್ರೇಲ್ ಪ್ರತ್ಯೇಕವಾಗಿದೆ ಎಂದು ಕೆಲವರು ಹೇಳುತ್ತಾರೆ. ಆದರೆ, ಭಾರತದಲ್ಲಿ ಇಸ್ರೇಲ್‌ಗೆ ಹಾಗೂ ನನಗೆ ವೈಯಕ್ತಿಕವಾಗಿ ದೊರೆಯುತ್ತಿರುವ ಬೆಂಬಲ ಅದ್ಭುತವಾಗಿದೆ ಎಂದು ನೆತನ್ಯಾಹು ಹೇಳಿದರು.
ಜಾಗತಿಕ ಮಟ್ಟದಲ್ಲಿ ಇಸ್ರೇಲ್ ಇನ್ನಷ್ಟು ಮೈತ್ರಿ ರಾಷ್ಟ್ರಗಳೊಂದಿಗೆ ಸಹಕಾರವನ್ನು ವಿಸ್ತರಿಸಬೇಕಿದೆ ಎಂದು ಅಭಿಪ್ರಾಯಪಟ್ಟ ಅವರು, ಭಾರತ-ಇಸ್ರೇಲ್ ಸ್ನೇಹ ಸಂಬಂಧ ಮುಂದಿನ ದಿನಗಳಲ್ಲಿ ಇನ್ನಷ್ಟು ಗಟ್ಟಿಯಾಗುವ ವಿಶ್ವಾಸ ವ್ಯಕ್ತಪಡಿಸಿದರು.








