ಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸ್ ದರ ಏರಿಕೆ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಯಾವುದೇ ಹೆಚ್ಚುವರಿ ಭಾರ ಬೀಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಇನ್ನೊಂದೆಡೆ, ರಾಜ್ಯದಲ್ಲಿ LPG ಗ್ಯಾಸ್ ಪೂರೈಕೆ ಸಮಸ್ಯೆ ತಲೆದೋರಿರುವ ಹಿನ್ನೆಲೆ, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆಹಾರ ಸಚಿವರು ಸಹ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
LPG ಗ್ಯಾಸ್ ಅಭಾವದಿಂದ ವಿಶೇಷವಾಗಿ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾಸ್ ಪೂರೈಕೆ ಕೇಂದ್ರ ಸರ್ಕಾರದ ಹೊಣೆಗಾರಿಕೆ ಎಂದು ಅವರು ಹೇಳಿದ್ದಾರೆ. ಈ ನಡುವೆ, ಹಲವು ಗ್ಯಾಸ್ ಏಜೆನ್ಸಿಗಳು ಕಾರ್ಯನಿರ್ವಹಣೆಯನ್ನು ನಿಲ್ಲಿಸುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.
ಸರ್ಕಾರ ಈ ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.








