ಬೆಂಗಳೂರು : ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆ ವಿಚಾರಕ್ಕೆ ಬೆಳಗಾವಿಯಲ್ಲಿ ಹೋರಾಟ ಭುಗಿಲೆದ್ದಿದೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಇದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ.
ಸಂಗೊಳ್ಳಿ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.