ಬಳ್ಳಾರಿಯಲ್ಲಿ ಲಾಕ್ ಡೌನ್ ಇಲ್ಲ, ಜನರನ್ನು ಕಷ್ಟಕ್ಕೆ ತಳ್ಳಬಾರದೆಂದು ಈ ನಿರ್ಧಾರ : ಆನಂದ್ ಸಿಂಗ್
ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗುತ್ತದೆ ಎಂಬ ವದಂತಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್ ಆನಂದ್ ಸಿಂಗ್, ಜಿಲ್ಲೆಯಲ್ಲಿ ಸದ್ಯಕ್ಕೆ ನೋ ಲಾಕ್ ಡೌನ್ ಎಂದು ಸ್ಪಷ್ಟನೆ ನೀಡಿದ್ದಾರೆ.
ಇಂದು ಬಳ್ಳಾರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಕೊರೊನಾ ಸ್ಥಿತಿಗತಿ ಮತ್ತು ಸೋಂಕು ಹರಡುವಿಕೆಗೆ ಸಂಬಂಧಿಸಿದಂತೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬಳ್ಳಾರಿ ಜಿಲ್ಲೆಯಲ್ಲಿ ಇನ್ನೂ 15 ದಿನಗಳ ಕಾಲ ಕೊರೊನಾ ಸೋಂಕಿತರ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಹೀಗಾಗಿ
ಜಿಲ್ಲೆಯಲ್ಲಿ ಸದ್ಯಕ್ಕೆ ನೋ ಲಾಕ್ ಡೌನ್. ಲಾಕ್ ಡೌನ್ ವಿಧಿಸಲಾಗಿರುವ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಹರಡುವಿಕೆಯ ಪ್ರಮಾಣದಲ್ಲಿ ಆಗುವ ಬದಲಾವಣೆಗಳನ್ನು ಪರಿಶೀಲಿಸಲಾಗುತ್ತದೆ. ನಂತರ ನಮ್ಮಲ್ಲಿ ಅದನ್ನು ಜಾರಿಗೆ ತರಬೇಕೇ, ಬೇಡ್ವೆ ಎಂಬುದನ್ನು ಇನ್ನೊಂದು ವಾರ ಕಾದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಲಾಕ್ ಡೌನ್ ವಿಧಿಸಿದ ಸಂದರ್ಭದಲ್ಲಿ ಜನರು ಅನುಭವಿಸಿದ ಪಾಡು ದೇವರೇ ಬಲ್ಲ ಎಂಬಂತಾಗಿತ್ತು. ಮತ್ತೆ ಪ್ರತಿನಿತ್ಯ ದುಡಿದು ತಮ್ಮ ಜೀವನ ನಡೆಸುವ ಜನರನ್ನು ಕಷ್ಟಕ್ಕೆ ತಳ್ಳಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆನಂದ್ ಸಿಂಗ್ ತಿಳಿಸಿದ್ದಾರೆ.







