ಬೆಂಗಳೂರು: ಬೆಳಗಾವಿಯ ಪಿರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿಚಾರವಾಗಿ ಶಿವಸೇನೆ ಮಾಡುತ್ತಿರುವ ಕಿರಿಕ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಖಾರವಾಗಿ ತಿರುಗೇಟು ನೀಡಿದ್ದಾರೆ.
ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಮರಾಠಿ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಅಪರಾಧ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಟ್ವಿಟರ್ ನಲ್ಲಿ ತಿರುಗೇಟು ನೀಡಿದ್ದಾರೆ.
ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ, ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುತ್ತಿದ್ದೇನೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ, ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಮ್ಮ ನಾಡಿನ ನೆಲ-ಜಲ, ಭಾಷೆ ಹಾಗೂ ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ ಎಂದು ಶಿವಸೇನೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.