ಮೇ.17ರ ವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೂಡ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರು ಭರವಸೆ ನೀಡಿದರು.
ಶನಿವಾರ ನಿಪ್ಪಾಣಿ ನಗರಸಭೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿಯನ್ನ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು ಮೇ.17 ರ ವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೂಡ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ಎಲ್ಲ ರೀತಿಯ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡಲಾಗುವುದು.
ಇದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರಸ್ಥರಿಗೆ ವ್ಯವಹಾರ ಮಾಡಲು ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಸರಕಾರದ ನಿಯಮಗಳನ್ನ ಪಾಲನೆ ಮಾಡುವುದನ್ನು ಮರೆಯಬಾರದು. ಏನಾದರು ಸಮಸ್ಯೆಗಳಿದ್ದರೇ ತಕ್ಷಣವೇ ನನ್ನ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿಪ್ಪಾಣಿ ತಹಶೀಲ್ದಾರ ಪ್ರಕಾಶ್ ಗಾಯಕವಾಡ, ಪೌರಾಯುಕ್ತ ಮಹಾವೀರ ಬೋರಣ್ಣವರ, ನಿಪ್ಪಾಣಿಯ ಬಿಜೆಪಿ ನಗರಾಧ್ಯಕ್ಷ ಪ್ರಣವ ಮಾನವಿ ಹಾಗೂ ನಗರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.








