ಬೆಂಗಳೂರು : ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ್ ಎಲ್ ಜಾರಕಿಹೊಳಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ಕಳೆದ ಒಂದುವಾರ ದಿಂದ ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಕಾಡುತ್ತಿತ್ತು. ಜೊತೆಗೆ ಬಿಜೆಪಿಯಿಂದ ಟಿಕೆಟ್ ಪಡೆದು ರಾಜ್ಯಸಭೆ ಪ್ರವೇಶ ಮಾಡಬೇಕೆಂದು ಅನೇಕರು ಪ್ರಯತ್ನಿಸಿದರು.
ಅದರಲ್ಲೂ ಪ್ರಮುಖವಾಗಿ ಪ್ರಭಾಕರ್ ಕೋರೆ, ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಹೆಸರುಗಳನ್ನು ಮುನ್ನೆಲೆಗೆ ಬಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಫೈನಲ್ ಆಗಿ ಕೇಂದ್ರಕ್ಕೆ ಶಿಫಾರಸ್ಸು ಆಗಿದ್ದವು. ಆದರೆ ಅಂತಿಮ ಕ್ಷಣದಲ್ಲಿ ಅಚ್ಚರಿ ಮೂಡುವಂತೆ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದವರು ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ.

ಆ ಮೂಲಕ ಪ್ರಭಾಕರ್ ಕೋರೆ, ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ರಾಜ್ಯಸಭೆ ಪ್ರವೇಶಿಸುವ ಕನಸು ಭಗ್ನಗೊಂಡಿದೆ. ಪ್ರಭಾಕರ್ ಕೋರೆ, ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಹೆಸರುಗಳು ರಾಜ್ಯದ ಬಿಜೆಪಿ ನಾಯಕರು ಪೈನಲ್ ಮಾಡಿ ಕೇಂದ್ರಕ್ಕೆ ಕಳಿಸಿದ್ದರು. ಜೂನ್ 7 ರಂದು ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣೆ ಸಮಿತಿ ಸಭೆಯಲ್ಲಿ ಮಾತ್ರ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಫೈನಲ್ ಆಗಿವೆ.








