ಯೋಗಿ ಆದಿತ್ಯನಾಥ ಪ್ರಮಾಣವಚನ | ಉತ್ತರ ಪ್ರದೇಶಕ್ಕೆ ತೆರಳಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಇಂದು ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಸಿಂ ಬಸವರಾಜ್ ಬೊಮ್ಮಾಯಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಜೊತೆ ಹೋಗಿದ್ದಾರೆ.
ವಿಶೇಷ ವಿಮಾನದ ಮೂಲಕ ಲಖನೌಗೆ ತೆರಳಿದ ಮುಖ್ಯಮಂತ್ರಿಗಳು, ಸಂಜೆ 4 ಗಂಟೆಗೆ ಲಖನೌದ ಅಟಲ್ ಬಿಹಾರಿ ವಾಜಪೇಯಿ ಏಕತಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪದಗ್ರಹಣ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಯೋಗಿ ಆದಿತ್ಯನಾಥ್ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶದ ಲಖನೌಗೆ ತೆರಳಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಆಗಮಿಸಿದ್ದರು. ಅಲ್ಲಿಂದ ನೇರವಾಗಿ ಹೆಚ್ಎಎಲ್ ಏರ್ಪೋರ್ಟ್ಗೆ ತೆರಳಿದ್ದು, ಸಿಎಂ ಬೊಮ್ಮಾಯಿ ಜೊತೆ ವಿಶೇಷ ವಿಮಾನ ಏರಿ ಯುಪಿಗೆ ಪ್ರಯಾಣಿಸಿದ್ದಾರೆ.
ಪ್ರವಾಸಕ್ಕೂ ಮುನ್ನ ಬೆಂಗಳೂರಿನ ಆರ್ಟಿ ನಗರದಲ್ಲಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಕಾರ್ಯಕ್ರಮ ಇದೆ. ಅದರಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ, ಇವತ್ತು ರಾತ್ರಿಯೇ ಕಾರ್ಯಕ್ರಮ ಮುಗಿಸಿ ವಾಪಸ್ ಬರುತ್ತೇನೆ ಎಂದು ತಿಳಿಸಿದರು.
ಅಲ್ಲದೇ ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ಮಾತನಾಡದ ಸಿಎಂ, ಅದರ ಬಗ್ಗೆ ಶಿಕ್ಷಣ ಸಚಿವರು ಮಾಹಿತಿ ನೀಡಲಿದ್ದಾರೆ ಎಂದು ಹೇಳಿ ಹೊರಟರು.
ಹೆಚ್ಎಎಲ್ಗೆ ಹೊರಟ ಸಿಎಂ ಜೊತೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತೆರಳಿದ್ದು, ಪಠ್ಯ ಪರಿಷ್ಕರಣೆ ಕುರಿತ ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ, ಹೆಚ್ಎಎಲ್ನಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ಮಾಡಿ, ವಾಪಸ್ ಬಂದ ನಂತರ ಅವರು ಪಠ್ಯ ಪರಿಷ್ಕರಣೆ ಕುರಿತು ಸ್ಪಷ್ಟೀಕರಣ ನೀಡಲಿದ್ದಾರೆ ಎನ್ನಲಾಗಿದೆ.