ಬೆಂಗಳೂರು: ನಾವು ಅಧಿಕಾರದ ದಾಹಕ್ಕಾಗಿ ಈ ಪಾದಯಾತ್ರೆ ನಡೆಸುತ್ತಿಲ್ಲ. ರಾಜ್ಯದ ಇತಿಹಾಸದಲ್ಲಿಯೇ ಇಲ್ಲಿಯವರೆಗೆ ಇಂತಹ ಪಾದಯಾತ್ರೆ ಎಂದಿಗೂ ನಡೆದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಾಗೂ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕಿತ್ತೊಗೆಯುವುದಕ್ಕಾಗಿ ಈ ಪಾದಯಾತ್ರೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1,200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1,95,000 ಕೋಟಿ ಸಾಲವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಜನರಿಗೆ ತಾವು ಚುನಾಯಿಸಿರುವ ಸರ್ಕಾರ ಇರುವ ಬಗ್ಗೆ ಅನುಮಾನವಿದೆ. ಅನೇಕ ಭರವಸೆಯೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಸಿಗುತ್ತಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ರೈತರಿಗೆ ಯಾವುದೇ ಯೋಜನೆ ಜಾರಿಗೆ ತಂದಿಲ್ಲ ಎಂದು ಆರೋಪಿಸಿದ್ದಾರೆ.