ಬೆಂಗಳೂರು : ನಂಜನಗೂಡು ವೈದ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಪ್ರಕರಣ ಇದೀಗ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಂದ್ರ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಮಧ್ಯೆ ಪ್ರಕರಣದ ಸಂಬಂಧ ಜಿಲ್ಲಾ ಪಂಚಾಯತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಯಾರೊಬ್ಬರೂ ಕೆಲಸ ಮಾಡುವುದಿಲ್ಲ ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯರು ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಿಬ್ಬಂದಿ ಪ್ರಾಣ ಒತ್ತೆ ಇಟ್ಟು ಸೇವೆ ಮಾಡುತ್ತಿದ್ದಾರೆ. ಅವರ ಸೇವೆಗೆ ಎಷ್ಟುಗೌರವ ಕೊಟ್ಟರೂ ಸಾಲದು. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ನಾನು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೆ. ಆಗ ಬಿಜೆಪಿ ನಾಯಕರು ವ್ಯಂಗ್ಯ ಮಾಡಿದ್ದರು. ಇಂದು ಪತಿಯನ್ನು ಕಳೆದುಕೊಂಡ ಹೆಣ್ಣುಮಗಳು ಧ್ವನಿ ಎತ್ತಿದ್ದಾರೆ. ಅರೆಸ್ಟ್ ಮಾಡಲು ನಿಮಗೆ ಎಷ್ಟು ದಿನ ಬೇಕು? ವೈದ್ಯಕೀಯ ಮಿನಿಸ್ಟರ್ ಅಲ್ಲಿ ಹೋಗಿ ನಿಂತ್ರೆ ಸಾಕಾ? ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಯಾಕೆ ಎಂದು ಪ್ರಶ್ನಿಸಿದ್ದಾರೆ.
ಆರು ತಿಂಗಳಿಂದ ಆ ವೈದ್ಯಾಧಿಕಾರಿಗೆ ಕಿರುಕುಳ ಕೊಡಲಾಗಿದೆ ಎಂದು ಆರೋಪಿಸಿದ ಡಿಕೆಶಿ, ಕೆಲಸ ಮಾಡಲು ಸರಿಯಾಗಿ ಅವಕಾಶ ಕೊಟ್ಟಿಲ್ಲ.ಅವರು ಆತ್ಮಹತ್ಯೆ ಮಾಡಿಕೊಳ್ಳೋಕೆ ದಾರಿ ಮಾಡಿಕೊಟ್ಟಿದ್ದಾರೆ. ಬೇರೆಯದು ಆದರೆ ಸುಮೋಟೋ ಕೇಸ್ ಹಾಕಿಕೊಳ್ಳುತ್ತಾರೆ. ಈ ಪ್ರಕರಣದಲ್ಲಿ ಯಾಕೆ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿದ್ದಾರೆ.