ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಮೂವರನ್ನು ಅರೆಸ್ಟ್ ಮಾಡಲಾಗಿದ್ದು, ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿದೆ.
ಅಶೋಕನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಆನಂತರ ಆರೋಪಿಗಳನ್ನು ಕೋರಮಂಗಲದ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಸದ್ಯ ಕೋರ್ಟ್ ಆರೋಪಿಗಳನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ವಿಧಾನಸಭೆಯಲ್ಲಿ ನಡೆದ ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ ವೇಳೆ ಬೆಂಬಲಿಗರೊಂದಿಗೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಅವರ ಬೆಂಬಲಿಗರು ಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದು ಕೇಳಿ ಬಂದಿತ್ತು. ಈ ವಿಷಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಭಾರೀ ವಿವಾದವೇ ಭುಗಿಲಿದ್ದೆತ್ತು. ಸಾಕಷ್ಟು ವಿರೋಧಗಳ ನಂತರ ಕಾಂಗ್ರೆಸ್ ಇದನ್ನು ತನಿಖೆಗೆ ನೀಡಿತ್ತು. ಸದ್ಯ ವೀಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ, ವರದಿ ಬಂದಿದ್ದು, ಅವರು ಪಾಕ್ ಪರ ಘೋಷಣೆ ಕೂಗಿರುವುದು ದೃಢಪಟ್ಟಿದೆ. ಹೀಗಾಗಿ ಆರೋಪಿಗಳನ್ನು ಬಂಧಿಸಲಾಗಿದೆ.