Politics : ಬಂಜಾರ ಸಮುದಾಯವನ್ನು ಅಭಿವೃದ್ಧಿಗೊಳಿಸಿ, ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತೇನೆ : ಪ್ರಭು ಬಿ.ಚವ್ಹಾಣ್ ಭರವಸೆ
ಬಂಜಾರ ಸಮುದಾಯವನ್ನು ಅಭಿವೃದ್ಧಿಗೊಳಿಸಿ, ಸಮಾಜದ ಮುಖ್ಯವಾಹಿನಿಗೆ ತರಲು ನನ್ನ ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದು ಪಶು ಸಂಗೋಪನಾ ಸಚಿವ ಅವರು ಭರವಸೆ ನೀಡಿದರು.
ಉತ್ತರ ಪ್ರದೇಶ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಸರೋಜಿನಿನಗರ ಮತ್ತು ಭೋಗನೈಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚಿಸುತ್ತಿದ್ದ ಸಂದರ್ಭದಲ್ಲಿ ಬಂಜಾರ ಸಮುದಾಯದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಉತ್ತರ ಪ್ರದೇಶ ರಾಜ್ಯದಲ್ಲಿ ಬಂಜಾರ ಸಮುದಾಯ 60 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಕರ್ನಾಟಕದಲ್ಲಿ ಬಂಜಾರ ಸಮುದಾಯ ಅಭಿವೃದ್ಧಿಯತ್ತ ಸಾಗುತ್ತಿರುವ ಮಾದರಿಯಲ್ಲಿಯೇ ಇಲ್ಲಿಯೂ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಚುನಾವಣೆ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ, ಗೃಹ ಸಚಿವ ಅಮಿತ್ ಷಾ, ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಬಳಿಗೆ ಬಂಜಾರ ಸಮುದಾಯದ ಪ್ರಮುಖರ ನಿಯೋಗವನ್ನು ಕೊಂಡೊಯ್ದು ಹೆಚ್ಚಿನ ಅನುದಾನ ತಂದು ಸಮಗ್ರ ಅಭಿವೃದ್ಧಿ ಪಡಿಸುತ್ತೇನೆ ಎಂದು ಅಭಯ ನೀಡಿದರು.
ಶಿಕ್ಷಣ, ಮನೆ, ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಪ್ರತಿ ಜಿಲ್ಲೆಗೊಂದು ಸೇವಾ ಲಾಲ್ ಭವನ ನಿರ್ಮಾಣ, ಸಹಾಯಧನ ಯೋಜನೆಗಳ ಅನುಷ್ಠಾನಕ್ಕೆ ಕೇಳಿ ಬಂದ ಮನವಿಗಳನ್ನು ಆಲಿಸಿದ ಸಚಿವ ಪ್ರಭು ಚವ್ಹಾಣ್ ಅವರು, ಬಿಜೆಪಿ ನಿಮ್ಮೊಂದಿಗೆ ಸದಾ ಇದ್ದು, ನಿಮ್ಮ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಬಿಜೆಪಿಗೆ ಮತ ನೀಡುವಂತೆ ಪ್ರಭು ಚವ್ಹಾಣ್ ಕರೆ ನೀಡಿದರು.
ಬಂಜಾರ ಸಮುದಾಯ ವಾಸಿಸುವ ತಾಂಡಗಳು-ಬಡಾವಣೆಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಲ್ಪಿಸಿರುವ ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು, ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವುದರಿಂದ ನಾವೆಲ್ಲರೂ ಇಂದು ಎಲ್ಲಾ ರಂಗದಲ್ಲೂ ತೊಡಗಿಸಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ಬಂಜಾರ ಸಮುದಾಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ತಳಮಟ್ಟದಿಂದಲೂ ಅಭಿವೃದ್ಧಿ ಹೊಂದಲು ಅವಶ್ಯಕವಾಗುವಂತೆ ಉತ್ತರಪ್ರದೇಶದಲ್ಲಿ ಬಂಜಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಇದೇ ವೇಳೆ ಅವರು ಹೇಳಿದರು.
ಉತ್ತರ ಪ್ರದೇಶ ರಾಜ್ಯವನ್ನು ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರು ಬಹಳಷ್ಟು ಅಭಿವೃದ್ಧಿಪಡಿಸಿದ್ದಾರೆ. ಉತ್ತರ ಪ್ರದೇಶವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿರುವುದನ್ನು ಕಂಡಿರುವ ಬಂಜಾರ ಸಮುದಾಯವು ಬಿಜೆಪಿ ಬೆಂಬಲಕ್ಕೆ ನಿಲ್ಲಲಿದೆ ಎಂದು ಪ್ರಭು ಚವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದರು.








