ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆಯಾಗಿದೆ. ಲಾಕ್ ಡೌನ್ ತೆರವಾದ ಬಳಿಕವಷ್ಟೇ ಪರೀಕ್ಷಾ ದಿನಾಂಕ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇದೀಗ ಮೇ 4 ಅಥವಾ 5 ರಂದು ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಹಿಂದಿನ ವೇಳಾಪಟ್ಟಿಯಂತೆ ಏಪ್ರಿಲ್ 9ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಬೇಕಾಗಿತ್ತು. ಆದ್ರೆ ಕೇಂದ್ರ ಸರ್ಕಾರದ ಲಾಕ್‌ಡೌನ್ ಆದೇಶದ ಹಿನ್ನೆಲೆಯಲ್ಲಿ, ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿತ್ತು.
ಸದ್ಯ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದೆ. ಆದ್ರೆ ಸಂಪೂರ್ಣವಾಗಿ ಲಾಕ್ ಡೌನ್ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ರಾಜ್ಯದಲ್ಲಿ ಮೇ 3ರವರೆಗೆ ಲಾಕ್ ಡೌನ್ ಇರಲಿದೆ. ಮೇ 3ರ ನಂತರ ಮತ್ತೊಮ್ಮೆ ಸಚಿವರ ನೇತೃತ್ವದಲ್ಲಿ ಸಭೆ ಸೇರಿ ಪರೀಕ್ಷೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಮೇ 4 ಅಥವಾ ಮೇ 5ರಂದು ಅಧಿಕೃತವಾಗಿ ಸಚಿವರು ಸಭೆ ಮುಗಿಸಿ, ವೇಳಾಪಟ್ಟಿ ಬಿಡುಗಡೆಗೊಳಿಸಬಹುದು ಎನ್ನಲಾಗಿದೆ.








